ಬೆಳಗಾವಿಯ ಉದ್ಯಮಬಾಗ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬೆಳಗಾವಿ ನಗರದ ಉದ್ಯಮಬಾಗ್ ಪೊಲೀಸ್ ಠಾಣಾ ವ್ಯಾಪ್ತಿಯ ಉಚ್ಛವ ಕ್ರಾಸ್ ಡಬಲ್ ರಸ್ತೆ ಬಳಿಯ ಪೌಂಡ್ರಿ ಕ್ಲಸ್ಟರ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಉಚಗಾಂವ ನಿವಾಸಿ, 29 ವರ್ಷದ ಸಾಗರ ಸುರೇಶ ಮೋರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯಿಂದ 60,000 ರೂಪಾಯಿ ಮೌಲ್ಯದ 1 ಕೆಜಿ 212 ಗ್ರಾಂ ಗಾಂಜಾ, 8,000 ರೂಪಾಯಿ ಮೌಲ್ಯದ ಮೊಬೈಲ್, 35,000 ರೂಪಾಯಿ ಮೌಲ್ಯದ ಮೋಟಾರ್ ಸೈಕಲ್ ಹಾಗೂ 310 ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಉದ್ಯಮಬಾಗ್ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಉನ್ನತ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

