Belagavi

ಬೆಳಗಾವಿಯಲ್ಲಿ ಪಡಿತರ ಸರ್ವರ್ ಗೋಳು: ಪಡಿತರ ವಿತರಕರಿಂದ ಉಗ್ರ ಹೋರಾಟದ ಎಚ್ಚರಿಕೆ

Share

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ವ್ಯವಸ್ಥೆಯ ಸರ್ವರ್ ಸಮಸ್ಯೆ ತೀವ್ರಗೊಂಡಿದ್ದು, ತಕ್ಷಣ ಸಮಸ್ಯೆ ಪರಿಹರಿಸುವಂತೆ ಸರ್ಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾ ಘಟಕ ಒತ್ತಾಯಿಸಿದೆ.ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಮೂಲಕ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.

ರಾಜ್ಯಾದ್ಯಂತ ಪಡಿತರ ವಿತರಣೆ ವಿಳಂಬವಾಗಿದ್ದು, ತಿಂಗಳ ಕೊನೆಯ ಹಂತ ತಲುಪಿದರೂ ಹಲವು ನ್ಯಾಯಬೆಲೆ ಅಂಗಡಿಗಳಿಗೆ ಇನ್ನೂ ಪಡಿತರ ತಲುಪಿಲ್ಲ. ಇದರ ನಡುವೆ ಸರ್ವರ್ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ. ಒಬ್ಬ ಕಾರ್ಡ್‌ದಾರರ ಹೆಬ್ಬೆಟ್ಟು ಪಡೆದು ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಲು ಕನಿಷ್ಠ 15ರಿಂದ 20 ನಿಮಿಷ ಬೇಕಾಗುತ್ತಿದೆ. ಕೆಲವು ಕಡೆ ಇದಕ್ಕಿಂತಲೂ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದ್ದು, ಪಡಿತರ ಪಡೆಯಲು ಬರುವ ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಂಘ ತಿಳಿಸಿದೆ.

ಸೆಪ್ಟೆಂಬರ್ ಒಳಗಾಗಿ ಇ-ಕೆವೈಸಿ ಕಡ್ಡಾಯಗೊಳಿಸಿರುವುದರಿಂದ ಸರ್ವರ್ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ. ಹೀಗಾಗಿ ಸರ್ವರ್ ವ್ಯವಸ್ಥೆಯನ್ನು ಸರಾಗಗೊಳಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪಡಿತರ ವಿತರಣೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಎರಡು ದಿನಗಳೊಳಗೆ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳದಿದ್ದರೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲೆಯ ನ್ಯಾಯಬೆಲೆ ಅಂಗಡಿ ಮಾಲೀಕರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ಸಂಘ ಎಚ್ಚರಿಕೆ ನೀಡಿದೆ.

Tags:

error: Content is protected !!