Vijaypura

ಸಂಪುಟ ವಿಸ್ತರಣೆ: ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನ ಕೈತಪ್ಪಿತು; ಕಾಂಗ್ರೆಸ್ ಕೋಟೆಯಲ್ಲಿ ಸಚಿವಾಕಾಂಕ್ಷಿಗಳಿಗೆ ನಿರಾಸೆ

Share

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಹು ನಿರೀಕ್ಷಿತ ಕಸರತ್ತು ಅಂತ್ಯಗೊಂಡಿದ್ದು, ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಇಂದು ಸಂಜೆ 4 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯಾದ ಎರಡು ತಿಂಗಳ ಬಳಿಕ ನಡೆಯುತ್ತಿರುವ ಈ ಸಂಪುಟ ವಿಸ್ತರಣೆಯಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ಸಿಕ್ಕಿದ್ದರೂ, ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರೆಯದಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್…

ರಾಜ್ಯದ ರಾಜಕೀಯದ ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ವಿಜಯಪುರ ಜಿಲ್ಲೆಗೆ ಈಗಾಗಲೇ ಎಂ.ಬಿ. ಪಾಟೀಲ ಸಚಿವರಾಗಿದ್ದರೂ, ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಬಲವಾಗಿತ್ತು. ಆದರೆ ಅಂತಿಮ ಪಟ್ಟಿಯಲ್ಲಿ ಜಿಲ್ಲೆಯ ಯಾವುದೇ ಹೊಸ ಹೆಸರಿಗೆ ಅವಕಾಶ ಸಿಗದಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿರುವ ವಿಜಯಪುರ ಜಿಲ್ಲೆ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅತ್ಯಂತ ಬಲವಾದ ಜಿಲ್ಲೆಗಳಲ್ಲೊಂದು. ವಿಜಯಪುರ ನಗರ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿವೆ. ಅಲ್ಲದೆ, ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿರೋಧ ಪಕ್ಷದ ರಾಜಕೀಯವೂ ದುರ್ಬಲಗೊಂಡಿದೆ. ಇಂತಹ ಪರಿಸ್ಥಿತಿಯಲ್ಲೂ ಆರು ಕಾಂಗ್ರೆಸ್ ಶಾಸಕರಿರುವ ಜಿಲ್ಲೆಗೆ ಒಬ್ಬ ಸಚಿವ ಮಾತ್ರ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಬಾರಿ ಸಚಿವ ಸ್ಥಾನಕ್ಕಾಗಿ ಮಾಜಿ ಸಚಿವ ಶಿವಾನಂದ ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿದ್ದವು. ಆಡಳಿತ ಅನುಭವ ಹೊಂದಿರುವ ಶಿವಾನಂದ ಪಾಟೀಲ, ಯುವ ನಾಯಕತ್ವದ ಪ್ರತಿನಿಧಿಯಾಗಿ ಗುರುತಿಸಿಕೊಂಡಿರುವ ಯಶವಂತರಾಯಗೌಡ ಪಾಟೀಲ ಹಾಗೂ ಹಿರಿಯ ಶಾಸಕ ಅಪ್ಪಾಜಿ ಅವರಿಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅಂತಿಮವಾಗಿ ಯಾರಿಗೂ ಸಚಿವ ಸ್ಥಾನ ದೊರೆಯಲಿಲ್ಲ.
ಆದರೆ ಮತ್ತೊಂದೆಡೆ, ಈಗಾಗಲೇ ಜಿಲ್ಲೆಯ ಲಿಂಗಾಯತ ಸಮುದಾಯದ ಪ್ರತಿನಿಧಿಯಾಗಿ ಎಂ.ಬಿ. ಪಾಟೀಲ ಸಂಪುಟದಲ್ಲಿರುವ ಹಿನ್ನೆಲೆಯಲ್ಲಿ, ಅದೇ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಹೈಕಮಾಂಡ್ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನದ ಲೆಕ್ಕಾಚಾರಕ್ಕೆ ಆದ್ಯತೆ ನೀಡಿರುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯ ವಿಶ್ಲೇಷಿಸುತ್ತಿದೆ. ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕದ ಪ್ರಾತಿನಿಧ್ಯ, ಸಾಮಾಜಿಕ ಸಮತೋಲನ, ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ಮಹಿಳಾ ಪ್ರಾತಿನಿಧ್ಯ ಹಾಗೂ ಮುಂದಿನ ಚುನಾವಣೆಯ ರಾಜಕೀಯ ತಂತ್ರಗಳನ್ನು ಪರಿಗಣಿಸಿ ಕಾಂಗ್ರೆಸ್ ವರಿಷ್ಠರು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

ಒಟ್ನಲ್ಲಿ ಕಾಂಗ್ರೆಸ್‌ಗೆ ಅತ್ಯಧಿಕ ಬೆಂಬಲ ನೀಡಿರುವ ವಿಜಯಪುರ ಜಿಲ್ಲೆಗೆ ಎರಡನೇ ಸಚಿವ ಸ್ಥಾನ ಸಿಗದಿರುವುದು ಜಿಲ್ಲೆಯ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸಚಿವಾಕಾಂಕ್ಷಿಗಳಲ್ಲಿ ನಿರಾಸೆ ಉಂಟುಮಾಡಿದ್ದು, ಕಾಂಗ್ರೆಸ್ ಭದ್ರಕೋಟೆಯಾಗಿದ್ದರೂ ವಿಜಯಪುರಕ್ಕೆ ಮತ್ತೆ ಅನ್ಯಾಯವೇ? ಎಂಬ ಚರ್ಚೆಗೆ ಕಾರಣವಾಗಿದೆ.

ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ.

Tags:

error: Content is protected !!