ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿರುವ ಅಶೋಕ ಪಾಟೀಲ ಅವರಿಗೆ ಸೇರಿದ ಬೆಲ್ಲ ತಯಾರಿಕಾ ಘಟಕದಲ್ಲಿ ಆಕಸ್ಮಿಕವಾಗಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆ ನಡೆದ ತಕ್ಷಣವೇ ಘಟಕದಲ್ಲಿದ್ದ ಕೂಲಿ ಕಾರ್ಮಿಕರು ಹೊರಗೆ ಓಡಿಬಂದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕ್ಷಣಾರ್ಧದಲ್ಲಿ ಇಡೀ ಘಟಕಕ್ಕೆ ಆವರಿಸಿಕೊಂಡಿದ್ದು, ಬೆಂಕಿಯ ತೀವ್ರತೆಗೆ ಬೆಲ್ಲ ತಯಾರಿಕಾ ಉಪಕರಣಗಳು ಹಾಗೂ ದಾಸ್ತಾನು ಮಾಡಲಾಗಿದ್ದ ವಸ್ತುಗಳು ಸಂಪೂರ್ಣವಾಗಿ ಭಸ್ಮಗೊಂಡಿವೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕಿನ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ, ಸುದೀರ್ಘ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಪಟ್ಟರು. ಅಗ್ನಿ ದುರಂತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಕುರಿತು ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಬೆಂಕಿ ಅವಘಡಕ್ಕೆ ಕಾರಣ ಏನೆಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
