ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮ್ಮ ಮೇಲೆ ಕೇವಲ ಆರೋಪ ಬಂದಾಗ ರಾಜೀನಾಮೆ ಪಡೆಯಲು ಹೋರಾಟ ನಡೆಸಿದ್ದ ನಾಯಕರು, ಇಂದು ತಮ್ಮದೇ ಸಂಪುಟದ ಸಚಿವರ ಮೇಲೆ ಎಫ್‌ಐಆರ್ ದಾಖಲಾಗಿದ್ದರೂ ಮೌನ ವಹಿಸಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ , ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವರ ವಿಚಾರದಲ್ಲಿ ಸರ್ಕಾರದ ಧೋರಣೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಈ ಹಿಂದೆ ತಮ್ಮ ಮೇಲಿನ ಆರೋಪಗಳ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಾವೇ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದ್ದಾಗಿ ನೆನಪಿಸಿದ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ಚೆಕ್ ಹಾಗೂ ಬ್ಯಾಂಕ್ ಮೂಲಕ ಹಣ ಪಡೆದಿರುವುದು ತನಿಖೆಯಲ್ಲಿ ಸಾಬೀತಾಗಿದ್ದರೂ ಸಚಿವ ಸ್ಥಾನ ನೀಡಿರುವುದು ಡಬಲ್ ಸ್ಟ್ಯಾಂಡರ್ಡ್ ಅಲ್ಲವೇ ಎಂದು ಪ್ರಶ್ನಿಸಿದರು. ಕೂಡಲೇ ಸಂಬಂಧಪಟ್ಟ ಸಚಿವರ ರಾಜೀನಾಮೆ ಪಡೆದು ಮುಕ್ತ ತನಿಖೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ತಾವು ಬಿಜೆಪಿಗೆ ಮರಳಿ ಬರುವ ಕುರಿತು ಎದ್ದಿರುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅವರು, ತಾವೀಗ ಪಕ್ಷದಿಂದ ಹೊರಗಿದ್ದು ಈ ಕುರಿತು ಹೆಚ್ಚಿನೇನೂ ಹೇಳುವುದಿಲ್ಲ ಎಂದರು. ಆದರೆ ಮುಂದಿನ ಮೂರರಿಂದ ನಾಲ್ಕು ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿವೆ ಎಂದು ಭವಿಷ್ಯ ನುಡಿದರು.
