ಬೆಳಗಾವಿಯ ರೇಲ್ವೆ ಸ್ಟೇಷನ್ ರಸ್ತೆಯಲ್ಲಿರುವ ‘ಜಿ ಲೈಟ್ಸ್’ ಅಂಗಡಿಯಲ್ಲಿ ಭಾನುವಾರ ರಾತ್ರಿ ದಿಢೀರ್ ಬೆಂಕಿ ಅವಘಡ ಸಂಭವಿಸಿದೆ.


ಬೆಳಗಾವಿ ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ರೇಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಜಿ ಲೈಟ್ಸ್ ಶೋರೂಂನಲ್ಲಿ ರಾತ್ರಿ ಏಕಾಏಕಿ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಪರಿಶ್ರಮ ವಹಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಕ್ಷಣವೇ ಜಾಗೃತರಾದ ಸಾರ್ವಜನಿಕರು ಮತ್ತು ಅಂಗಡಿಯವರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಪಕ್ಕದ ಅಂಗಡಿಗಳಿಗೆ ಹರಡದಂತೆ ತಡೆದು, ಬೆಂಕಿಯನ್ನು ಸಂಪೂರ್ಣವಾಗಿ ಶಮನಗೊಳಿಸಿದರು. ಘಟನೆಯಲ್ಲಿ ಅಂಗಡಿಯಲ್ಲಿದ್ದ ವಿದ್ಯುತ್ ಉಪಕರಣಗಳು ಮತ್ತು ಅಲಂಕಾರಿಕ ಲೈಟ್‌ಗಳು ಸುಟ್ಟು ಭಸ್ಮವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
