Accident

ಗೋಕಾಕ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಮೂವರ ದಾರುಣ ಸಾವು!

Share

ಗೋಕಾಕ ತಾಲೂಕಿನ ಕೊಣ್ಣೂರ ಬಳಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮತ್ತೋರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಹಿಡಕಲ್‌ನಿಂದ ಗೋಕಾಕಕ್ಕೆ ತೆರಳುತ್ತಿದ್ದ ಬಸ್ ಹಾಗೂ ಗೋಕಾಕ್ ಫಾಲ್ಸ್‌ನ ಪೋರ್ಬಸ್ ಶಾಲೆಯಿಂದ ಕೊಣ್ಣೂರಿಗೆ ತೆರಳುತ್ತಿದ್ದ ಬೈಕ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸೈಫ್ ಮುಲ್ಲಾ (29), ಅವರ ಪುತ್ರಿ ಸಿಜಾ ಮುಲ್ಲಾ (4) ಹಾಗೂ ಸೈಫ್ ಅವರ ಗೆಳೆಯ ಇಮ್ತಿಯಾಜ್ ಬಡಗಾಂವ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಜಿಹಾನ್ ಶಾರುಖ್ ಕುಡಚಿಕರ ಎಂಬ ಮಗುವಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:

error: Content is protected !!