ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಹೊಸಪೇಟೆ ಮೂಲದ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯೇ ಈ ಕಲ್ಲೆಂತಕ ಅಪಘಾತಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಹೊಸಪೇಟೆ ಮೂಲದ ಕುಮಾರ್ (34) ಮತ್ತು ಮಂಜುನಾಥ್ ಎಂಬುವವರ ಮೇಲೆ ಹಿಂಬದಿಯಿಂದ ಅಜಾಗರೂಕತೆಯಿಂದ ಬಂದ ಮೈನಿಂಗ್ ಲಾರಿಯೊಂದು ಹರಿದು ಭೀಕರವಾಗಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ಸಂಡೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
