ಸಾಂಗ್ಲಿಯಲ್ಲಿ ನಡೆದ ಕೇಸರೆಕರ ದಂಪತಿಗಳ ಹತ್ಯೆ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಮತ್ತು ಮೃತ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಖಾನಾಪುರದಲ್ಲಿ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಒಟ್ಟಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಸಮಸ್ತ ಖಾನಾಪೂರ ತಾಲೂಕಿನ ಹಿಂದೂ ಬಾಂಧವರು ಹಾಗೂ ನಾಗರಿಕರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಶಾಸಕರಾದ ವಿಠ್ಠಲ ಹಲಗೇಕರ ಅವರು ಭಾಗವಹಿಸಿ, ಮೃತ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು.ಖಾನಾಪೂರದ ಲಕ್ಷ್ಮೀ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ಮೆರವಣಿಗೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹತ್ಯೆ ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾಕಾರರು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಕೇಸರೆಕರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ವಿಠ್ಠಲ ಹಲಗೇಕರ ಅವರು, ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನ್ಯಾಯಕ್ಕಾಗಿ ನಡೆದ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿ ಒಗ್ಗಟ್ಟಿನ ಸಂದೇಶ ಸಾರಿದರು.
