Bailahongala

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಕಿತ್ತೂರು ಮತ್ತು ಬೈಲಹೊಂಗಲ ಬಿಜೆಪಿ ಬೃಹತ್ ಪ್ರತಿಭಟನೆ

Share

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ೧೮೭ ಕೋಟಿ ರೂ. ಹಗರಣದ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಿತ್ತೂರು ಹಾಗೂ ಬೈಲಹೊಂಗಲ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬೆಳಗಾವಿಯ ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯು ಪ್ರಮುಖ ರಸ್ತೆಗಳ ಮೂಲಕ ಸಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ತಲುಪಿತು. ಈ ವೇಳೆ ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು, ಭ್ರಷ್ಟಾಚಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಅಧಿಕೃತ ಮನವಿಯನ್ನು ಸಲ್ಲಿಸಿ, ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ದಿವಾಳಿಯಾಗಿದ್ದು, ಜನಸಾಮಾನ್ಯರ ಮೇಲೆ ತೆರಿಗೆಯ ಭಾರ ಹೊರಿಸುತ್ತಿದೆ ಎಂದು ಕಿಡಿಕಾರಿದರು. ಇಷ್ಟೊಂದು ದೊಡ್ಡ ಮಟ್ಟದ ಹಗರಣದಲ್ಲಿ ಭಾಗಿಯಾಗಿದ್ದರೂ ಸಚಿವ ಬಿ. ನಾಗೇಂದ್ರ ಅವರನ್ನು ವಜಾಗೊಳಿಸದೆ ಮುಖ್ಯಮಂತ್ರಿಗಳು ರಕ್ಷಣೆ ಮಾಡುತ್ತಿರುವುದು ಖಂಡನೀಯ; ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕಿತ್ತೊಗೆಯದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ನಾಯಕಿಯೊಬ್ಬರು, ಕಾಂಗ್ರೆಸ್ ಸರ್ಕಾರವು ಹಗರಣದ ತನಿಖೆ ನಡೆಸಲು ಹಿಂದೇಟು ಹಾಕುವ ಮೂಲಕ ರಾಜಕೀಯ ನೈತಿಕತೆಯನ್ನು ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ವಾಗ್ದಾಳಿ ನಡೆಸಿದರು. ೧೯೫೬ರಲ್ಲಿ ರೈಲ್ವೆ ಅಪಘಾತದ ನೈತಿಕ ಹೊಣೆ ಹೊತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಹಾಗೂ ೧೯೮೪ರಲ್ಲಿ ರಾಮಕೃಷ್ಣ ಹೆಗಡೆ ಅವರು ರಾಜೀನಾಮೆ ನೀಡಿದ್ದನ್ನು ನೆನಪಿಸಿದ ಅವರು, ಕಾಂಗ್ರೆಸ್ ನಾಯಕರು ಭ್ರಷ್ಟರನ್ನು ರಕ್ಷಿಸುವುದನ್ನು ಬಿಟ್ಟು ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಕಿತ್ತೂರು ಹಾಗೂ ಬೈಲಹೊಂಗಲ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ಧರು.

Tags:

error: Content is protected !!