ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಹಾಗೂ ಹೊಸುರು ಗ್ರಾಮಗಳ ಸುತ್ತಮುತ್ತ ಚಿರತೆ ಸಂಚಾರ ಹೆಚ್ಚಾಗಿದ್ದು, ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಕೂಡಲೇ ಅದನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಮತ್ತು ಹೊಸುರು ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಚಿರತೆಯೊಂದು ಓಡಾಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಪ್ರತಿದಿನ ಒಂದಲ್ಲ ಒಂದು ಕಡೆ ಪ್ರತ್ಯಕ್ಷವಾಗುತ್ತಿರುವ ಈ ಚಿರತೆಯಿಂದಾಗಿ ರೈತರು ಮತ್ತು ಜನಸಾಮಾನ್ಯರು ಭಯದ ವಾತಾವರಣದಲ್ಲೇ ದಿನ ದೂಡುವಂತಾಗಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಚಿರತೆಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
