Vijaypura

ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಿಎಂ ಭೇಟಿ: ವಿಜಯಪುರಕ್ಕೆ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಭರವಸೆ – ರಾಘವ್ ಅಣ್ಣಿಗೇರಿ

Share

ವಿಜಯಪುರ,;
ಉತ್ತರ ಕರ್ನಾಟಕದ ಜನತೆಯನ್ನು ಕಾಡುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಹಾಗೂ ಫಲಪ್ರದ ಚರ್ಚೆ ನಡೆಸಲಾಗಿದೆ ಎಂದು ಬಿಜೆಪಿ ನಗರ ಯುವ ಮೋರ್ಚಾದ ಮಾಜಿ ಅಧ್ಯಕ್ಷ ರಾಘವ್ ಅಣ್ಣಿಗೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷ್ಣಾ ನದಿ ಮುಳುಗಡೆ ಪ್ರದೇಶದ ಸಾವಿರಾರು ಸಂತ್ರಸ್ತರಿಗೆ ಸಮರ್ಪಕ ಪರಿಹಾರ ದೊರಕದಿರುವ ವಿಷಯವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದ್ದು, ಸಂತ್ರಸ್ತರಿಗೆ ನ್ಯಾಯಯುತ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಸಿದ ವೇಳೆ, ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಸ್ವಂತ ಕಟ್ಟಡವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಪರಿಸ್ಥಿತಿಯನ್ನು ವಿವರಿಸಲಾಗಿದೆ. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ವಿಜಯಪುರದಲ್ಲಿ ಶೀಘ್ರದಲ್ಲೇ ಮಿನಿ ವಿಧಾನಸೌಧ ನಿರ್ಮಿಸಿ, ವಿವಿಧ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ವಿಜಯಪುರ ನಗರದ 24×7 ಕುಡಿಯುವ ನೀರಿನ ಯೋಜನೆ, ಅಂಡರ್‌ಗ್ರೌಂಡ್ ಡ್ರೈನೇಜ್, ಅಂಡರ್‌ಗ್ರೌಂಡ್ ವಿದ್ಯುತ್ ಕೇಬಲ್ ಕಾಮಗಾರಿ, ನೆನೆಗುದಿಗೆ ಬಿದ್ದಿರುವ ಮಾಸ್ಟರ್ ಪ್ಲಾನ್, ನಮೋ ನಗರದ ಕಳಪೆ ಕಾಮಗಾರಿ, ಸರ್ಕಾರಿ ಕನ್ನಡ ಶಾಲೆಗಳ ದುಸ್ಥಿತಿ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿನ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಜಿಲ್ಲೆಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಈ ಕುರಿತು ಸಮಗ್ರ ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ರಾಘವ್ ಅಣ್ಣಿಗೇರಿ ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರಕ್ಕೆ ಸಕಾರಾತ್ಮಕ ಸ್ಪಂದನೆ ನೀಡಿದ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಎಲ್ಲ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕುರಿತು ಚರ್ಚಿಸಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.

Tags:

error: Content is protected !!