ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ಆರಂಭದಲ್ಲೇ ವಿಮಾನ ಹಾರಾಟ ಆರಂಭಿಸುವ ಪ್ರಯತ್ನ ನಡೆದಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿಳಿಸಿದರು. ವಿಜಯಪುರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಅಗತ್ಯವಿರುವ ಕೇಂದ್ರ ಪರಿಸರ ಇಲಾಖೆಯ ಅನುಮತಿಗಾಗಿ ಕೋರಲಾಗಿದೆ. ಸದ್ಯ ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಅನುಮತಿ ಪಡೆಯಲು ಕೊಂಚ ವಿಳಂಬವಾಗಬಹುದು. ಆದರೆ ಶೀಘ್ರದಲ್ಲೇ ಅನುಮತಿ ದೊರೆಯುವ ವಿಶ್ವಾಸವಿದೆ ಎಂದರು. ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ವಾರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಭೂಸ್ವಾಧೀನ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಹೇಳಿದರು.

ವಿಜಯಪುರ ವಿಮಾನ ನಿಲ್ದಾಣವನ್ನು ಏರ್‌ಬಸ್-320 ವಿಮಾನಗಳ ಹಾರಾಟಕ್ಕೆ ಅನುಕೂಲವಾಗುವಂತೆ ₹618.75 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ರಾಜ್ಯ ಸರ್ಕಾರದ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯಿಂದ ಕಾಮಗಾರಿಗೆ ಅನುದಾನ ಒದಗಿಸಲಾಗುತ್ತಿದೆ. ಕಾಮಗಾರಿಯ ಮೇಲ್ವಿಚಾರಣೆಗೆ ಕೆಎಸ್‌ಐಐಡಿಸಿಯನ್ನು ನೋಡಲ್ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ ಎಂದು ವಿವರಿಸಿದರು. ಲೋಕೋಪ ಯೋಗಿ ಇಲಾಖೆಯಿಂದಲೇ ಕಾಮಗಾರಿ ಅನುಷ್ಠಾನಗೊಳ್ಳುತ್ತಿದ್ದು, ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ಕಾಮಗಾರಿ ನಿರ್ವಹಣೆ ಮತ್ತು ಸಲಹೆಗಾರರನ್ನಾಗಿ (PMC) ನೇಮಕ ಮಾಡಲಾಗಿದೆ ಎಂದರು.
ಪರಿಸರ ಇಲಾಖೆಯ ಅನುಮತಿ ಇಲ್ಲದಿರುವುದು ಹಾಗೂ ಸುಪ್ರೀಂಕೋರ್ಟ್ ತಡೆಯಾಜ್ಞೆಯಿಂದಾಗಿ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗಿತ್ತು. ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲರು ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮೂರು ವಾರಗಳ ಹಿಂದೆಯಷ್ಟೇ ತಡೆಯಾಜ್ಞೆ ತೆರವಾಗಿದೆ ಎಂದು ನಂಜಯ್ಯನಮಠ ತಿಳಿಸಿದರು.
