ಸರ್ಕಾರಿ ಕಚೇರಿಯನ್ನೇ ಖಾಸಗಿ ಕಾರ್ಯಕ್ರಮಕ್ಕೆ ಬಳಸಿಕೊಂಡಿರುವ ಆರೋಪ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕೇಳಿಬಂದಿದೆ.
ಇಂಡಿಯ ಬಿಎಸ್ಎನ್ಎಲ್ ಕಚೇರಿಯಲ್ಲಿ ಜೂನಿಯರ್ ಎಂಜಿನಿಯರ್ ಸುನೀಲ ಮದರಖಂಡಿ ಅವರ ಜನ್ಮದಿನವನ್ನು ಸಿಬ್ಬಂದಿಗಳು ಕಚೇರಿಯಲ್ಲೇ ಆಚರಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ತವ್ಯದ ವೇಳೆಯಲ್ಲೇ ಸರ್ಕಾರಿ ಕಚೇರಿ ಆವರಣದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ಕಚೇರಿಯನ್ನು ಖಾಸಗಿ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲು ಅವಕಾಶ ನೀಡಿರುವುದು ಹಾಗೂ ಕರ್ತವ್ಯದ ವೇಳೆ ಇಂತಹ ಆಚರಣೆ ನಡೆಸಿರುವುದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಕಚೇರಿಗಳನ್ನು ಸಾರ್ವಜನಿಕ ಸೇವೆಗಾಗಿ ಬಳಸಬೇಕಿದ್ದು, ಖಾಸಗಿ ಕಾರ್ಯಕ್ರಮಗಳಿಗೆ ದುರ್ಬಳಕೆ ಮಾಡಿಕೊಳ್ಳಬಾರದು. ಈ ಘಟನೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
