ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ವನ್ಯಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬನ ಮೇಲೆ ಕರಡಿ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಈ ಆಘಾತಕಾರಿ ಘಟನೆಯಿಂದ ಸುತ್ತಮುತ್ತಲಿನ ಗ್ರಾಮದ ಜನರು ತೀವ್ರ ಭಯಭೀತರಾಗಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್ (40) ಎಂಬ ರೈತನ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಇಂದು ಬೆಳಗ್ಗೆ ತಮ್ಮ ಸ್ವಂತ ಜಮೀನಿನಲ್ಲಿ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕಾಡಿನಿಂದ ಬಂದ ಕರಡಿ ದಾಳಿ ಮಾಡಿದ್ದು, ತಲೆ ಸೇರಿದಂತೆ ದೇಹದ ನಾನಾ ಭಾಗಗಳಲ್ಲಿ ತೀವ್ರವಾಗಿ ಪರಚಿದೆ. ಕರಡಿಯ ದಾಳಿಯಿಂದ ಗಾಯಗೊಂಡಿರುವ ರೈತ ಬಸವರಾಜ್ ಅವರನ್ನು ತಕ್ಷಣವೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದ ಗ್ರಾಮದ ಜನತೆ ಬೆಚ್ಚಿಬಿದ್ದಿದ್ದು, ರೈತರ ಸುರಕ್ಷತೆಗೆ ಮುಂದಾಗದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
