ಕ್ಲಾಸ್‌ನಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು, 17 ವರ್ಷದ ವಿದ್ಯಾರ್ಥಿಗೆ ಸಹಪಾಠಿಯೊಬ್ಬ ಚಾಕುವಿನಿಂದ ಇರಿದ ಘಟನೆ ಬೆಳಗಾವಿ ನಗರದ ಗೋಮಟೇಶ ವಿದ್ಯಾಪೀಠ ಕಾಲೇಜಿನಲ್ಲಿ ನಡೆದಿದೆ.

ಡಿಪ್ಲೊಮಾ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ನಡುವೆ ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಓರ್ವ ವಿದ್ಯಾರ್ಥಿ ಮತ್ತೋರ್ವ ವಿದ್ಯಾರ್ಥಿಯ ಭುಜಕ್ಕೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಲೇಜಿಗೆ ವಿದ್ಯಾರ್ಥಿಯೊಬ್ಬ ಚಾಕು ಇಟ್ಟುಕೊಂಡು ಬಂದಿದ್ದೇಕೆ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆಯಲು ಸ್ಥಳಕ್ಕೆ ಎಸಿಪಿ ಹಾಗೂ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
