ಬೆಳಗಾವಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಗೃಹ ಭಾಗ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ನಿವೃತ್ತ ಪೌರ ಕಾರ್ಮಿಕರಿಗೂ ನಿವೇಶನ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಅಗತ್ಯ ಜಾಗ ಗುರುತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಆದ್ಯತೆ ನೀಡಿದೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಸೌಲಭ್ಯ ಒದಗಿಸಲಾಗುತ್ತಿದೆ. ನಿವೃತ್ತ ಪೌರ ಕಾರ್ಮಿಕರಿಗೂ ಸ್ವಂತ ನಿವೇಶನ ಕಲ್ಪಿಸುವ ಉದ್ದೇಶದಿಂದ ಜಾಗ ಗುರುತಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಜಾಗದ ಲಭ್ಯತೆ ಪರಿಶೀಲಿಸಲಾಗುತ್ತಿದ್ದು, ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು
