ಬಳ್ಳಾರಿ ತಾಲೂಕಿನ ಚಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯಾಧಿಕಾರಿಗಳು ತೆಲುಗು ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆಸ್ಪತ್ರೆಯಲ್ಲೇ ಮೋಜು-ಮಸ್ತಿ ನಡೆಸಿದ ಅಧಿಕಾರಿಗಳ ನಡವಳಿಕೆಗೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿಸ್ತುಕ್ರಮಕ್ಕೆ ಆಗ್ರಹ ಕೇಳಿಬಂದಿದೆ.


ಬಳ್ಳಾರಿ ತಾಲೂಕಿನ ಚಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ 15ರ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಆರೋಗ್ಯಾಧಿಕಾರಿ ಹುಲಿಗೇಶ್ ಹಾಗೂ ಆರೋಗ್ಯ ಸುರಕ್ಷಣಾಧಿಕಾರಿ ಬಿ. ಕವಿತಾ ಅವರು ತೆಲುಗಿನ ಜನಪ್ರಿಯ ಹಾಡಿಗೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಕರ್ತವ್ಯ ನಿರತ ಆಸ್ಪತ್ರೆಯ ಆವರಣದಲ್ಲೇ ನಡೆದ ಈ ಮೋಜು-ಮಸ್ತಿಗೆ ಆಸ್ಪತ್ರೆಯ ಇತರ ಸಿಬ್ಬಂದಿ ಸಿಳ್ಳೆ, ಚಪ್ಪಾಳೆ ತಟ್ಟಿ ಪ್ರೋತ್ಸಾಹ ನೀಡಿದ್ದು, ಪ್ರಸ್ತುತ ಈ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದ ಸರ್ಕಾರಿ ಆಸ್ಪತ್ರೆಯಲ್ಲೇ ಅಧಿಕಾರಿಗಳು ಜವಾಬ್ದಾರಿ ಮರೆತು ವರ್ತಿಸಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
