Vijaypura

ಇಂಡಿ, ಚಡಚಣ ಬರ ಘೋಷಣೆಗಾಗಿ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ

Share

ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಟಪಡಿಸಿದರು. ವಿಜಯಪುರ ದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ನಾಲ್ಕನೇ ಹಂತದಲ್ಲಿ 188 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದಾಗಲೂ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಕೈಬಿಡಲಾಗಿತ್ತು.

ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದರೂ, ತಮ್ಮ ಮತಕ್ಷೇತ್ರದ ಎರಡು ತಾಲೂಕುಗಳನ್ನು ಘೋಷಣೆ ಮಾಡದ ಕಾರಣ ರಾಜೀನಾಮೆ ನೀಡಬೇಕಾಯಿತು ಎಂದು ಹೇಳಿದರು. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದು, ಮತಕ್ಷೇತ್ರದ ಜನರ ಸಮಸ್ಯೆಗಳಿಗೆ ಗಟ್ಟಿ ಧ್ವನಿಯಾಗಿ ನಿಲ್ಲುವುದು ತಮ್ಮ ಧರ್ಮ. ಸರ್ಕಾರಕ್ಕೆ ಮನವರಿಕೆ ಮಾಡುವುದು ಕೆಲವೊಮ್ಮೆ ತಡವಾಗಬಹುದು; ಪತ್ರದ ಮೂಲಕವಾಗಲಿ, ಭೇಟಿಯಾಗಿಯಾಗಲಿ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಬೇಕಾಗುತ್ತದೆ ಎಂದರು. ತಮ್ಮ ರಾಜೀನಾಮೆ ವಿಚಾರವಾಗಿ ವ್ಯಂಗ್ಯವಾಡು ವವರ ಮಾತಿಗೆ ಮಹತ್ವ ನೀಡುವುದಿಲ್ಲ. ಕಳೆದ ಬಾರಿ ಸಚಿವ ಸ್ಥಾನ ನೀಡಲಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿರಲಿಲ್ಲ. ಆದರೆ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದೆ. ಬಳಿಕ ಸರ್ಕಾರದ ಪ್ರತಿನಿಧಿಗಳು ಮನವರಿಕೆ ಮಾಡಿದ ಹಿನ್ನೆಲೆಯಲ್ಲಿ ರಾಜೀನಾಮೆ ವಾಪಸ್ ಪಡೆದಿದ್ದೆ ಎಂದು ವಿವರಿಸಿದರು. “ತಾಳ್ಮೆಗೂ ಒಂದು ಮಿತಿ ಇರುತ್ತದೆ. ನನ್ನ ಸ್ಥಾನದಲ್ಲಿ ಯಾರೇ ಇದ್ದರೂ ಇದೇ ರೀತಿಯ ನಿರ್ಧಾರ ಕೈಗೊಳ್ಳುತ್ತಿದ್ದರು” ಎಂದು ಯಶವಂತರಾಯಗೌಡ ಪಾಟೀಲ ಹೇಳಿದರು. ಇದೀಗ ವಿಜಯಪುರ ಜಿಲ್ಲೆಯ 13 ತಾಲೂಕುಗಳನ್ನೂ ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ರಾಜ್ಯದಲ್ಲಿ ಒಟ್ಟು 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದರು.

ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲಾ ಎಂದರು. ತಮ್ಮ ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ಸ್ಪಷ್ಟಪಡಿಸಿದ ಯಶವಂತರಾಯ ಗೌಡ ಪಾಟೀಲ, “ಈ ಕಾಂಗ್ರೆಸ್ ಪಕ್ಷವನ್ನು ನಾನು ಕಟ್ಟಿದ್ದೇನೆ. 40 ವರ್ಷಗಳಿಂದ ಕಾಂಗ್ರೆಸ್‌ಗಾಗಿ ದುಡಿದಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲೇ ಹುಟ್ಟಿದ್ದೇನೆ, ಇದರಲ್ಲೇ ಸಾಯುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ” ಎಂದು ಹೇಳಿದರು. ಇನ್ನೂ ತಮ್ಮ ರಾಜೀನಾಮೆ ವಿಚಾರವಾಗಿ ಅವರು ನಾಟಕ ಮಾಡುತ್ತಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ, “ನಾನು ಯಾವುದೇ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಸಂಕ್ಷಿಪ್ತವಾಗಿ ಹೇಳಿದರು.

Tags:

error: Content is protected !!