ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ಧನ ವಿತರಿಸಲು ಒತ್ತಾಯಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನೆರವು ನೀಡುವ ಉದ್ದೇಶದಿಂದ ಅಖಂಡ ಕರ್ನಾಟಕ ರೈತ ಸಂಘ ದೇಣಿಗೆ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ. ಈ ಕುರಿತು ವಿಜಯಪುರ ಜಿಲ್ಲಾ ರೈತ ಸಂಘದ ಅಧ್ಯಕ್ಷ ಅರವಿಂದ ಕುಲಕರ್ಣಿ ಮಾಹಿತಿ ನೀಡಿದ್ದು, ನಾಳೆ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಪೂಜೆ ಸಲ್ಲಿಸುವ ಮೂಲಕ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರಿಗೆ ಸರ್ಕಾರದಿಂದ ಬರ ಪರಿಹಾರ ಧನ ಸಮರ್ಪಕವಾಗಿ ದೊರೆಯಬೇಕು ಎಂಬುದು ರೈತ ಸಂಘದ ಪ್ರಮುಖ ಆಗ್ರಹ ವಾಗಿದೆ. ಸರ್ಕಾರದ ಬೊಕ್ಕಸಕ್ಕೆ ಬಲ ತುಂಬುವ ಮೂಲಕ ರೈತರ ನೆರವಿಗೆ ಸರ್ಕಾರವನ್ನು ಪ್ರೇರೇಪಿಸುವ ಉದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತಿದೆ ಎಂದು ಅರವಿಂದ ಕುಲಕರ್ಣಿ ತಿಳಿಸಿದ್ದಾರೆ. ತಾಳಿಕೋಟಿಯಿಂದ ಆರಂಭವಾಗುವ ದೇಣಿಗೆ ಸಂಗ್ರಹ ಅಭಿಯಾನವನ್ನು ಮುಂದಿನ ದಿನಗಳಲ್ಲಿ ವಿವಿಧೆಡೆ ವಿಸ್ತರಿಸುವ ಕುರಿತು ರೈತ ಸಂಘ ಚಿಂತನೆ ನಡೆಸಿದೆ ಎಂದು ಅವರು ಹೇಳಿದ್ದಾರೆ.

