ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಪಟ್ಟಣದ ಕಾಗವಾಡ, ಶಿರಗುಪ್ಪಿ ರಸ್ತೆಯಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ.

ಶಿರಗುಪ್ಪಿ ಗ್ರಾಮದ ಶಿವಾನಂದ ಬಾಬಗೌಡ ಪಾಟೀಲ್ ಅವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಜಮೀನಿಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಅಗ್ನಿಯ ತೀವ್ರತೆಗೆ ಸುಮಾರು 8 ಎಕರೆ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ನಾಶವಾಗಿದ್ದು, ಒಟ್ಟು ಸುಮಾರು 15 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿರುವುದಾಗಿ ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಮೂರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟರು.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಿಂದ ರೈತರಿಗೆ ಭಾರಿ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ.
