ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಸಲುವಾಗಿ ಭಾರತೀಯ ಜನತಾ ಪಕ್ಷದ ವತಿಯಿಂದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ಒಂದು ತಿಂಗಳ ಕಾಲ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಕಿರಣ ಜಾಧವ್ ಅವರ ನೇತೃತ್ವದಲ್ಲಿ ಬಿಜೆಪಿ ಉತ್ತರ ಮಂಡಲದ ಮಾಜಿ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ತಿಂಗಳ ಅವಧಿಯಲ್ಲಿ ನಡೆಸಲಿರುವ ಕಾರ್ಯಕ್ರಮಗಳ ಕುರಿತು ಪೂರ್ಣ ವಿಸ್ತರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಸಂಕಲ್ಪ ಮಾಡಿದರು. ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೆಳಗಾವಿಯ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಗೋ ಪೂಜೆ ನೆರವೇರಿಸಲಾಗುವುದು. ಬಳಿಕ ಬಿಮ್ಸ್ ಆಸ್ಪತ್ರೆಯ ಪ್ರಸೂತಿ ವಿಭಾಗಕ್ಕೆ ಭೇಟಿ ನೀಡಿ ಮಹಿಳೆಯರಿಗೆ ಹಣ್ಣು-ಹಂಪಲು ವಿತರಿಸಲಾಗುವುದು.
ತಿಂಗಳ ಅವಧಿಯ ಪ್ರಮುಖ ಕಾರ್ಯಕ್ರಮಗಳು:
– ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ
– ವೃಕ್ಷಾರೋಪಣ ಮತ್ತು ಪರಿಸರ ಜಾಗೃತಿ ಅಭಿಯಾನ
– ಅನಾಥ ಮಕ್ಕಳೊಂದಿಗೆ ಸಹಭೋಜನ ಕಾರ್ಯಕ್ರಮ
– ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಸಕ್ರಿಯ ಭಾಗವಹಿಸುವಿಕೆ
– ಕೇಂದ್ರ ಸರ್ಕಾರದ ಜನಕಲ್ಯಾಣ ಯೋಜನೆಗಳ ಕುರಿತು ಮನೆ-ಮನೆಗೆ ತೆರಳಿ ಜಾಗೃತಿ
– ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ವಿಶೇಷ ಸ್ವಚ್ಛತಾ ಮತ್ತು ಸೇವಾ ಕಾರ್ಯಕ್ರಮ
ವಿದ್ಯಾರ್ಥಿಗಳಿಗಾಗಿ ಕ್ರೀಡಾಕೂಟ:
ಶಾಲಾ ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ದೈಹಿಕ ಸದೃಢತೆ ಮತ್ತು ತಂಡದ ಸಹಕಾರ ಬೆಳೆಸುವ ಉದ್ದೇಶದಿಂದ 5ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಖೋ-ಖೋ, ಕಬಡ್ಡಿ ಮತ್ತು ವಾಲಿಬಾಲ್ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಸಮಾಜದ ಎಲ್ಲ ವರ್ಗದ ಜನರನ್ನು ಒಳಗೊಂಡು ಸೇವಾ ಮನೋಭಾವ, ಸಾಮಾಜಿಕ ಬದ್ಧತೆ, ಪರಿಸರ ಸಂರಕ್ಷಣೆ ಮತ್ತು ಆರೋಗ್ಯ ಜಾಗೃತಿಯೊಂದಿಗೆ ಈ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡಿ, ಸೇವಾ ಪರ್ವದಲ್ಲಿ ತೊಡಗಿಸಿಕೊಳ್ಳುವುದಾಗಿ ಭರವಸೆ ನೀಡಿದರು.
