Khanapur

ಹಿರೇಮುನವಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರೆಯ ಪೂರ್ವ ಭಾವಿ ಸಭೆಯಲ್ಲಿ ಶಾಸಕ ವಿಠ್ಠಲ ಹಲಗೇಕರ ಭಾಗಿ

Share

ಖಾನಾಪೂರ ತಾಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ ಮುಂಬರುವ 28 ವರ್ಷಗಳ ನಂತರ, ಅಂದರೆ ಏಪ್ರಿಲ್ 2027ರಲ್ಲಿ ನಡೆಯಲಿರುವ ಐತಿಹಾಸಿಕ ಶ್ರೀ ಮಹಾಲಕ್ಷ್ಮಿ ಜಾತ್ರೆಯ ನಿಮಿತ್ತ ಪೂರ್ವಭಾವಿ ಸಭೆಯು ಇತ್ತೀಚೆಗೆ ಗ್ರಾಮದ ಐತಿಹಾಸಿಕ ಕಲಮೇಶ್ವರ ದೇವಸ್ಥಾನದಲ್ಲಿ ಅತ್ಯಂತ ಉತ್ಸಾಹದಿಂದ ನಡೆಯಿತು.

ಈ ಸಭೆಯ ಅಧ್ಯಕ್ಷತೆಯನ್ನು ಶ್ರೀನಿವಾಸ ಕುಲಕರ್ಣಿ ಅವರು ವಹಿಸಿದ್ದರು.

ಕಾರ್ಯಕ್ರಮಕ್ಕೆ ಶಾಸಕ ವಿಠ್ಠಲ್ ಹಲಗೇಕರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅವರು ಗ್ರಾಮಸ್ಥರ ಎಲ್ಲಾ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಅತ್ಯಂತ ಗಂಭೀರವಾಗಿ ಆಲಿಸಿದರು.
ಶಾಸಕ ವಿಠ್ಠಲ ಹಲಗೇಕರ ಅವರು, ಈ ಜಾತ್ರೆಯು ಅತ್ಯಂತ ಮಹತ್ವದ್ದಾಗಿದ್ದು, ಕಳೆದ 28 ವರ್ಷಗಳಲ್ಲಿ ನಡೆಯದಿದ್ದ ಈ ಜಾತ್ರೆಯನ್ನು ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಹಾಗೂ ಶಿಸ್ತುಬದ್ಧವಾಗಿ ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಜಾತ್ರೆಯ ಪೂರ್ವಸಿದ್ಧತೆಗಾಗಿ ಈಗಿನಿಂದಲೇ ಎಲ್ಲಾ ಇಲಾಖೆಗಳು ಹಾಗೂ ಗ್ರಾಮಸ್ಥರು ಒಗ್ಗಟ್ಟಿನಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಜಾತ್ರೆಯ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳ ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು. ಜಾತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಕಾಮಗಾರಿ ಹಾಗೂ ದುರಸ್ತಿ ಅತ್ಯಂತ ಮಹತ್ವದ್ದಾಗಿದ್ದು, ಮಂಜೂರಾದ ರಸ್ತೆ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಹೇಳಿದರು. ಅಲ್ಲದೆ, ಜಾತ್ರೆಯ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮುಂಚಿತವಾಗಿಯೇ ಟ್ರಾನ್ಸ್‌ಫಾರ್ಮರ್‌ಗಳ ಸಂಖ್ಯೆಯನ್ನು ಹೆಚ್ಚಿಸಿ, ವಿದ್ಯುತ್ ಸಂಬಂಧಿತ ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದರ ಜೊತೆಗೆ, ಕುಡಿಯುವ ನೀರಿನ ಸಮರ್ಪಕ ಯೋಜನೆಗಾಗಿ ಪ್ರತಿಯೊಂದು ಗ್ರಾಮದಲ್ಲಿಯೂ ಹಾಗೂ ಜಾತ್ರಾ ಪರಿಸರದಲ್ಲಿ ಟ್ಯಾಂಕರ್ ವ್ಯವಸ್ಥೆ ಮತ್ತು ಸೂಕ್ತ ಜಲವಾಹಿನಿಗಳನ್ನು ಅಳವಡಿಸುವ ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ತಿಳಿಸಿದರು.



ಜಾತ್ರೆಯ ಸಂದರ್ಭದಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಕರೆ ನೀಡಿದರು.

ಜಾತ್ರೆಯ ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಆಡಳಿತವು ಸದಾ ಜಾಗರೂಕರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಯಾವುದೇ ಕಾಮಗಾರಿಗೆ ಹಣದ ಕೊರತೆಯಾಗಲು ಬಿಡುವುದಿಲ್ಲ ಹಾಗೂ ಸರ್ಕಾರದಿಂದ ಜಾತ್ರೆಗೆ ಸಂಪೂರ್ಣ ಸಹಕಾರ ದೊರಕಿಸಿಕೊಡಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.

“ನಮ್ಮ ಗ್ರಾಮದಲ್ಲಿ ಜಾತ್ರೆಯನ್ನು ಯಶಸ್ವಿಗೊಳಿಸಬೇಕಾದರೆ ಎಲ್ಲರೂ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಬೇಕು,” ಎಂದು ಶಾಸಕ ವಿಠ್ಠಲ ಹಲಗೇಕರ ಅವರು ಪ್ರತಿಪಾದಿಸಿದರು. ಹಿಂದಿನ ಕೆಲವು ಜಾತ್ರೆಗಳ ಅನುಭವಗಳಿಂದ ಪಾಠ ಕಲಿತು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಲೋಪವಾಗದಂತೆ ಜಾತ್ರಾ ಸಮಿತಿ ಹಾಗೂ ಗ್ರಾಮಸ್ಥರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

ಈ ಮಹತ್ವದ ಸಭೆಯಲ್ಲಿ ಸಭೆಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಕುಲಕರ್ಣಿ, ಗ್ರಾಮದ ಜಾತ್ರಾ ಸಮಿತಿಯ ಹಿರಿಯರಾದ ಅಶೋಕ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳು ಗ್ರಾಮಸ್ಥರು ಹಾಗೂ ಮಹಿಳೆಯರು ಬಹುಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Tags:

error: Content is protected !!