ಹುಬ್ಬಳ್ಳಿ-ಧಾರವಾಡದ ನೂತನ ಪೊಲೀಸ್ ಆಯುಕ್ತರಾಗಿ ಭೂಷಣ್ ಬೋರಸೆ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಗರದಲ್ಲಿ ನಿಯಮ ಉಲ್ಲಂಘನೆ ವಿರುದ್ಧ ಪೊಲೀಸ್ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

ನಗರದ ಗೋಕುಲ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನುಬದ್ಧ ಅವಧಿ ಮೀರಿ ಡ್ಯಾನ್ಸ್ ಪಬ್ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ‘ಐಸ್ ಕ್ಯೂಬ್’ ಪಬ್ ಮೇಲೆ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದಾರೆ.
ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶೃತಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪೊಲೀಸರ ತಂಡ ಪಬ್‌ನಲ್ಲಿ ಪರಿಶೀಲನೆ ನಡೆಸಿದೆ. ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಪಬ್‌ನ್ನು ಬಂದ್ ಮಾಡಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ನೂತನ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರ ಆದೇಶದ ಮೇರೆಗೆ ನಡೆದ ಈ ಕಾರ್ಯಾಚರಣೆ ಇದೀಗ ಹುಬ್ಬಳ್ಳಿ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ನಗರದಲ್ಲಿ ತಡರಾತ್ರಿವರೆಗೂ ನಿಯಮ ಉಲ್ಲಂಘಿಸಿ ನಡೆಯುತ್ತಿರುವ ಪಬ್, ಡ್ಯಾನ್ಸ್ ಬಾರ್ ಸೇರಿದಂತೆ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಇದೇ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ನೂತನ ಪೊಲೀಸ್ ಆಯುಕ್ತರ ಕಾರ್ಯವೈಖರಿಯ ಬಗ್ಗೆ ಹುಬ್ಬಳ್ಳಿ ಜನರಲ್ಲಿ ನಿರೀಕ್ಷೆ ಹೆಚ್ಚಾಗಿದ್ದು, ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಿಗಿಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತವಾಗುತ್ತಿದೆ.
ಇನ್ನು ಮುಂದೆ ಹುಬ್ಬಳ್ಳಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬೀಳುತ್ತಾ? ನೂತನ ಆಯುಕ್ತರ ‘ಆ್ಯಕ್ಷನ್’ ಮುಂದುವರಿಯುತ್ತಾ? ಎಂಬುದನ್ನು ಕಾದುನೋಡಬೇಕಿದೆ.
