Belagavi

ಬೆಳಗಾವಿಯಲ್ಲಿ ಬರ ಪರಿಹಾರಕ್ಕಾಗಿ ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಾ. ಜಿ. ಪರಮೇಶ್ವರ ಸ್ಪಷ್ಟನೆ!

Share

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬರ ಪರಿಸ್ಥಿತಿ ಕುರಿತು ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುತ್ತಿದ್ದು, ಪ್ರಧಾನ ಮಂತ್ರಿಗಳ ಭೇಟಿಗಾಗಿ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಸರ್ಕಾರದಿಂದ ಮೊದಲ ಕಂತಿನ ಪರಿಹಾರ ಬಿಡುಗಡೆ ಮಾಡಲಾಗಿದ್ದು, ಇದು ಅಂತಿಮವಲ್ಲ ಎಂದರು. ಬರದಿಂದ ರಾಜ್ಯದಲ್ಲಿ ಒಟ್ಟು 18 ಸಾವಿರ ಕೋಟಿ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದ್ದು, ಎನ್‌ಡಿಆರ್‌ಎಫ್ ನಿಯಮಗಳ ಅಡಿಯಲ್ಲಿ 3,500 ಕೋಟಿ ರೂಪಾಯಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಮತ್ತಷ್ಟು ಬರ ಪೀಡಿತ ತಾಲೂಕುಗಳನ್ನು ಘೋಷಿಸುವುದರ ಜೊತೆಗೆ, ಕೇಂದ್ರಕ್ಕೆ ಎರಡನೇ ಹಾಗೂ ಮೂರನೇ ಹಂತದ ಮನವಿಗಳನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಬದಲಾವಣೆ ಕುರಿತು ಕೇಂದ್ರಕ್ಕೆ ಇದುವರೆಗೆ 10 ರಿಂದ 15 ಪತ್ರಗಳನ್ನು ಬರೆಯಲಾಗಿದೆ ಎಂದು ಡಿಸಿಎಂ ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು. ಹೆಚ್ಚು ಹಣ ಬಿಡುಗಡೆ ಮಾಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ನಿಯಮಗಳನ್ನು ಬದಲಾಯಿಸುತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಸಂಕಷ್ಟದಲ್ಲಿರುವ ಜನರಿಗೆ ತಕ್ಷಣವೇ ಪರಿಹಾರ ಸಿಗಬೇಕು ಎಂದು ಬಲವಾಗಿ ಒತ್ತಾಯಿಸಿದರು. ಇನ್ನು ಅಹಿಂದ ನಾಯಕರನ್ನು ಒಗ್ಗೂಡಿಸುವ ಕೆ.ಎನ್. ರಾಜಣ್ಣ ಅವರ ಪ್ರಯತ್ನದ ಕುರಿತು ಪ್ರತಿಕ್ರಿಯಿಸಿ, ಆ ಬಗ್ಗೆ ತಮಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

Tags:

error: Content is protected !!