ಸ್ಥಳೀಯ ಬಸವೇಶ್ವರ ವೃತ್ತದಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ರಸ್ತೆಯ ಮೇಲೆಯೇ ಗಲೀಜು ನೀರು ಹರಿಯುತ್ತಿರುವುದರಿಂದ ಇಡೀ ಪ್ರದೇಶವೇ ನರಕಸಾದೃಶ್ಯವಾಗಿದೆ. ಪುರಸಭೆಯ ಬೇಜವಾಬ್ದಾರಿತನ ಹಾಗೂ ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಮಳೆಯಾದರೆ ಸಾಕು ಚರಂಡಿ ನೀರು ರಸ್ತೆಯ ಮೇಲೆ ಹರಿಯುವುದರಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಸಂಪೂರ್ಣ ಹಾಳಾಗುತ್ತಿದ್ದು, ತಾಣವೇ ದುರ್ನಾತ ಬೀರುತ್ತಿದೆ. ನಿತ್ಯವೂ ನೂರಾರು ವಾಹನ ಸವಾರರು ಹಾಗೂ ಪಾದಚಾರಿಗಳು ಈ ಗಲೀಜು ನೀರಿನಲ್ಲಿಯೇ ಸಂಚರಿಸಬೇಕಾದ ದುಸ್ಥಿತಿ ಎದುರಾಗಿದೆ. ದುರ್ನಾತದಿಂದಾಗಿ ಸಾಂಕ್ರಾಮಿಕ ರೋಗಗಳ ಭೀತಿಯೂ ವ್ಯಾಪಕವಾಗಿ ಆವರಿಸಿದೆ.

ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಕಂಡು ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳು ಕಟುವಾಗಿ ಕಿಡಿಕಾರಿದ್ದಾರೆ.
