State

ಸಿದ್ದರಾಮಯ್ಯ ಜನನಾಯಕ, ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಸಚಿವ ರಾಯರೆಡ್ಡಿ ಬೆಂಬಲ

Share

ಶಾಸಕ ಪ್ರದೀಪ್ ಈಶ್ವರ್ ಅವರ ಸಿಎಂ ಹೇಳಿಕೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಡೆಗಳ ಕುರಿತು ಕೊಪ್ಪಳದ ಗುನ್ನಾಳ ಗ್ರಾಮದಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಪ್ರದೀಪ್ ಈಶ್ವರ್ ಹೇಳಿಕೆಯಲ್ಲಿ ತಪ್ಪೇನೂ ಇಲ್ಲ ಎಂದಿರುವ ಅವರು, ಸಿದ್ದರಾಮಯ್ಯ ಅವರನ್ನು ಯಾರೂ ಮೂಲೆಗುಂಪು ಮಾಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವ ಬಸವರಾಜ ರಾಯರೆಡ್ಡಿ, ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ ಅಷ್ಟೇ ಎಂದರು. ಮುಖ್ಯಮಂತ್ರಿ ಹುದ್ದೆ ಎಂಬುದು ಪಕ್ಷಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಯಾರನ್ನು ಸಿಎಂ ಮಾಡಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ. ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲದಿರುವುದರಿಂದ ಆ ಪ್ರಶ್ನೆ ಈಗ ಉದ್ಭವಿಸುವುದಿಲ್ಲ. ಸಮಯ ಬಂದಾಗ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ತಾವೇ ಹಿಂದೆ ಹೇಳಿದ್ದನ್ನು ನೆನಪಿಸಿದ ಅವರು, ಪ್ರತಿಯೊಬ್ಬರಿಗೂ ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ರಾಯರೆಡ್ಡಿ, ಸಿದ್ದರಾಮಯ್ಯ ಅವರು ಪ್ರಬಲ ಜನನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ರೂವಾರಿ. ಜಾರಕಿಹೊಳಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ 224 ಶಾಸಕರು ಸಿದ್ದರಾಮಯ್ಯ ಅವರೊಂದಿಗಿದ್ದಾರೆ. ಸಿದ್ದರಾಮಯ್ಯ ಮತ್ತು ಜಾರಕಿಹೊಳಿ ನಡುವೆ ಉತ್ತಮ ಸ್ನೇಹವಿದ್ದು, ನಾವೆಲ್ಲರೂ ಒಂದಾಗಿದ್ದೇವೆ. ಸಿದ್ದರಾಮಯ್ಯ ಅವರ ಭೇಟಿಯ ಬಗ್ಗೆ ಬಿಜೆಪಿ ನಾಯಕರು ಅನಗತ್ಯ ಚರ್ಚೆ ಮಾಡುತ್ತಿದ್ದಾರೆ. ಕೇವಲ ಭೇಟಿಯಾದ ತಕ್ಷಣ ಕಾಂಗ್ರೆಸ್ ತೊರೆಯಲು ಸಾಧ್ಯವಿಲ್ಲ, ಸಿದ್ದರಾಮಯ್ಯ ಎಂದಿಗೂ ಒಬ್ಬಂಟಿಯಲ್ಲ ಎಂದು ಪ್ರತಿಪಾದಿಸಿದರು.

Tags:

error: Content is protected !!