Vijaypura

ವಿಜಯಪುರಕ್ಕೆ ಮತ್ತೊಂದು ರಾಷ್ಟ್ರೀಯ ಕ್ರೀಡಾಕೂಟದ ಗರಿ; ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್ ಆಯೋಜನೆಗೆ ಸಿದ್ಧತೆ

Share

*ವೈಭವದಿಂದ ನಡೆಸಲು ಜಿಲ್ಲಾಡಳಿತ, ದಾನಿಗಳ ಸಹಕಾರಕ್ಕೆ ಮನವಿ*

ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವ ವಿಜಯಪುರ ಜಿಲ್ಲೆಗೆ ಮತ್ತೊಂದು ಮಹತ್ವದ ಕ್ರೀಡಾಕೂಟದ ಅವಕಾಶ ಲಭಿಸಿದೆ. ವಿಜಯಪುರ ಜಿಲ್ಲೆಯಲ್ಲಿ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್ ಆಯೋಜಿಸಲು ಅವಕಾಶ ದೊರೆತಿದ್ದು, ಇದನ್ನು ಯಶಸ್ವಿಯಾಗಿ ನಡೆಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಕರ್ನಾಟಕ ರಾಜ್ಯ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ರಾಜು ಬಿರಾದಾರ ತಿಳಿಸಿದರು.

ವಿಜಯಪುರ ನಗರದಲ್ಲಿ ಮಾತನಾಡಿದ ಅವರಿ ಇದೇ ಸೆಪ್ಟೆಂಬರ್ 5 ಮತ್ತು 6 ರಂದು ವಿಜಯಪುರ ಜಿಲ್ಲೆಗೆ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್ ಆಯೋಜಿಸುವ ಅವಕಾಶ ದೊರೆತಿರುವುದು ಜಿಲ್ಲೆಯ ಕ್ರೀಡಾಭಿಮಾನಿಗಳಿಗೆ ಹೆಮ್ಮೆಯ ವಿಚಾರವಾಗಿದೆ. ಈ ಕ್ರೀಡಾಕೂಟದಲ್ಲಿ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದೆ.
ಚಾಂಪಿಯನ್‌ಶಿಪ್‌ಗಾಗಿ ಅಗತ್ಯ ಸೌಲಭ್ಯಗಳು ಹಾಗೂ ವ್ಯವಸ್ಥೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ ಎಂದರು. ವಿಶೇಷವಾಗಿ ರೋಡ್ ಸೈಕ್ಲಿಂಗ್ ಸ್ಪರ್ಧೆ ನಡೆಯುವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಹಾಗೂ ಕ್ರೀಡಾಪಟುಗಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರಮುಖವಾಗಿದೆ.

ರೋಡ್ ಸೈಕ್ಲಿಂಗ್ ಸ್ಪರ್ಧೆಯನ್ನು ಹೈವೇ ರಸ್ತೆಯಲ್ಲಿ ನಡೆಸುವ ಸಾಧ್ಯತೆ ಇದ್ದು, ಸ್ಪರ್ಧೆಯ ಸಂದರ್ಭದಲ್ಲಿ ಸಂಚಾರ ವ್ಯವಸ್ಥೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಸುಮಾರು ಒಂದೂವರೆ ಕಿಲೋಮೀಟರ್‌ವರೆಗೆ ಒಂದು ಲ್ಯಾಪ್ ಇರುವ ರೀತಿಯಲ್ಲಿ ಸ್ಪರ್ಧೆ ನಡೆಸುವ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದರು. ಇನ್ನೂ ಈ ಕ್ರೀಡಾಕೂಟ ಆಯೋಜನೆಗೆ ಸುಮಾರು ₹5 ಲಕ್ಷದವರೆಗೆ ವೆಚ್ಚವಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದಿಂದಲೂ ಅಗತ್ಯ ನೆರವು ದೊರೆಯುವ ನಿರೀಕ್ಷೆಯಿದ್ದು, ಉಳಿದಂತೆ ಜಿಲ್ಲೆಯ ದಾನಿಗಳು, ಕ್ರೀಡಾಭಿಮಾನಿಗಳು ಹಾಗೂ ಸಂಘ-ಸಂಸ್ಥೆಗಳ ಸಹಕಾರ ಪಡೆಯಲು ಉದ್ದೇಶಿಸಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಕ್ರೀಡೆಗೆ ಸದಾ ಪ್ರೋತ್ಸಾಹ ನೀಡುತ್ತಿರುವ ದಾನಿಗಳು ಹಾಗೂ ಕ್ರೀಡಾಭಿಮಾನಿಗಳು ಈ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಉದಾರವಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ, ಜಿಲ್ಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಗುರುತಿಸುವಂತೆ ಮಾಡುವ ನಿಟ್ಟಿನಲ್ಲಿ ಈ ಚಾಂಪಿಯನ್‌ಶಿಪ್‌ನ್ನು ಅಚ್ಚುಕಟ್ಟಾಗಿ ಹಾಗೂ ವೈಭವದಿಂದ ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು. ವಿಜಯಪುರದಲ್ಲಿ ರೋಡ್ ಸೈಕ್ಲಿಂಗ್‌ಗೆ ಹೊಸ ವೇದಿಕೆ ಕಲ್ಪಿಸುವ ಮೂಲಕ ಜಿಲ್ಲೆಯ ಪ್ರತಿಭಾವಂತ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಗುರಿಯೂ ಹೊಂದಲಾಗಿದೆ ಎಂದು ತಿಳಿಸಿದರು. ‌ಸುದ್ದಿಗೋಷ್ಠಿಯಲ್ಲಿ ವಿಸಿಜಿಯ ಶಿವು ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

Tags:

error: Content is protected !!