ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ರೈತರ ಬೇಡಿಕೆಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬಿನ ಎಫ್ಆರ್ಪಿ, ಎಥನಾಲ್ ಖರೀದಿ ನೀತಿ, ಕಬ್ಬಿನ ತೂಕ, ರಿಕವರಿ ಹಾಗೂ ವೇಸ್ಟೇಜ್ ಸಮಸ್ಯೆಗಳ ಕುರಿತು ಸಮಿತಿ ಅಧ್ಯಯನ ನಡೆಸಿ ಶಿಫಾರಸು ಸಲ್ಲಿಸಲಿದೆ. ಕಬ್ಬಿನಿಂದ ಉತ್ಪಾದಿಸುವ ಎಥನಾಲ್ ಖರೀದಿ ಪ್ರಮಾಣ ಹೆಚ್ಚಿಸುವ ಕುರಿತು ಪೆಟ್ರೋಲಿಯಂ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.
ಕಬ್ಬಿನ ತೂಕ ಮತ್ತು ರಿಕವರಿ ಲೆಕ್ಕಾಚಾರದಲ್ಲಿ ಪಾರದರ್ಶಕತೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲಾಗುವುದು. ರೈತರ ಹಿತಾಸಕ್ತಿ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಇದೇ ವೇಳೆ, ಸ್ಟಿಂಗ್ ಆಪರೇಷನ್ ಪ್ರಕರಣದ ಸತ್ಯಾಸತ್ಯತೆ ಹೊರಬರಲು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆ ನಡೆಸಬೇಕು ಅಥವಾ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
