ಪಟ್ಟಣದಲ್ಲಿ ಹಾಯ್ದು ಹೋಗುವ ರಸ್ತೆಯಲ್ಲಿ ಬಿದ್ದಿರುವ ಪ್ರಾಣಾಂತಕ ತಗ್ಗು-ಗುಂಡಿಗಳನ್ನು ಮುಚ್ಚಿ, ತಕ್ಷಣವೇ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಶನಿವಾರ ಗೂಟೂರ-ಕಾಗವಾಡ ರಸ್ತೆ ತಡೆದು ಉಗ್ರ ಪ್ರತಿಭಟನೆ ನಡೆಸಿದರು.
ಚಿಕ್ಕೋಡಿ ಪಟ್ಟಣದ ಪ್ರಮುಖ ಮಾರ್ಗದಲ್ಲಿ ಬೃಹತ್ ಗಾತ್ರದ ತಗ್ಗು-ಗುಂಡಿಗಳು ಬಿದ್ದಿದ್ದು, ಸಾರ್ವಜನಿಕರ ಹಾಗೂ ವಾಹನ ಸವಾರರ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸಿವೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಸ್ತೆಯ ತಗ್ಗು-ಗುಂಡಿಗಳಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.
ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಸಂಜು ಬಡಿಗೇರೆ ಹಾಗೂ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, “ಚಿಕ್ಕೋಡಿ ಪಟ್ಟಣದಲ್ಲಿ ಹಾಯ್ದು ಹೋಗುವ ಗೂಟೂರ-ಕಾಗವಾಡ ರಸ್ತೆಯಲ್ಲಿ ದಿನನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ ಪ್ರಸ್ತುತ ಈ ರಸ್ತೆಯಲ್ಲಿ ಜೀವ ತೆಗೆಯುವಂತಹ ಆಳವಾದ ಗುಂಡಿಗಳು ಬಿದ್ದಿದ್ದರೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಸಣ್ಣಪುಟ್ಟ ಅಪಘಾತಗಳು ಸಂಭವಿಸಿ ಸವಾರರು ಗಾಯಗೊಳ್ಳುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿರುವುದು ಖಂಡನೀಯ ಎಂದು ಕಿಡಿಕಾರಿದರು.
ರಸ್ತೆ ತಡೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಶೀಘ್ರವೇ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಇನ್ನು ತೀವ್ರ ಸ್ವರೂಪದ ಹೋರಾಟ ರೂಪಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಈ ಪ್ರತಿಭಟನೆಯಲ್ಲಿ ಕರವೇಯ ಪ್ರಮುಖ ಪದಾಧಿಕಾರಿಗಳು, ಸ್ಥಳೀಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
