ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಧಿಸಿದ್ದಾರೆ.ಹಾಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು.

ಇಂದು ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್, ಪ್ರವಾಸೋದ್ಯಮ ಹಾಗೂ ಇಂದನ ಸಚಿವರಾದ ಕೆ.ಜೆ. ಜಾರ್ಜ್, ಗೃಹ ಸಚಿವ ಪ್ರಿಯಂಕ್ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭೆ ಮತ್ತು ಲೋಕಸಭೆ ಸಂಸದರು, ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

