ಜನರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನವನ್ನು ನಡೆಸಲಾಗುತ್ತಿದೆ. ಜನರ ಅಹವಾಲುಗಳಿಗೆ ಸ್ಪಂದಿಸುವಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ತ್ವರಿತವಾಗಿ ಕ್ರಮವಹಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು


ಖಾನಾಪುರದ ಲೋಕಮಾನ್ಯ ಟಿಳಕ ಭವನದಲ್ಲಿ ಸೋಮವಾರ (ಅ.05) ನಡೆದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಸಂಬಂಧಿಸಿದ ಇಲಾಖೆಗಳು ನಿಯಮಿತವಾಗಿ ಪರಿಶೀಲನೆ ನಡೆಸಿ, ಅರ್ಹ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.

ಪ್ರಜಾಸೇವಾ ಆಂದೋಲನ ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸಲು ಸಹಕಾರಿಯಾಗಿದೆ. ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ, ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಕುರಿತು ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸ್ಮಶಾನ ಭೂಮಿ ಮಂಜೂರು, ಕಂದಾಯ ಇಲಾಖೆ, ಶಾಲಾ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದ ಸುಮಾರು 200 ಅರ್ಜಿಗಳು ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾಗಿವೆ. ಸಾರ್ವಜನಿಕರು ಸಲ್ಲಿಸಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ, ನಿಯಮಾನುಸಾರ ಶೀಘ್ರವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಹಿಂದೆ ಯರಗಟ್ಟಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಸುಮಾರು 250 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ ಸುಮಾರು ಶೇ.30ರಷ್ಟು ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನೂ ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ಪರಿಶೀಲಿಸಿ ವಿಲೇವಾರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಖಾನಾಪೂರ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಪ್ರಜಾಸೇವಾ ಆಂದೋಲನದಲ್ಲಿ ಅರ್ಜಿಗಳನ್ನು ಸಲ್ಲಿಸಿ ಸದುಪಯೋಗ ಪಡೆದುಕೊಂಡರು.
ಖಾನಾಪೂರ ಮತಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರಿದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಬಸವರಾಜ ಅಡವಿಮಠ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವೀಂದ್ರ ಬಂಗಾರಪ್ಪನವರ, ಖಾನಾಪೂರ ತಹಶೀಲ್ದಾರ ದುಂಡಪ್ಪ ಕೋಮಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ ಕೋಳೇಕರ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ. ಎನ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
