ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ರೈತರ ಆಕ್ರೋಶ ಭುಗಿಲೆದ್ದಿದೆ. ರೈತ ಮುಖಂಡರಾದ ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ಅವರು ಕರ್ನಾಟಕ ಬಂದ್ಗೆ ಕರೆ ನೀಡಿರುವ ಬೆನ್ನಲ್ಲೇ ವಿಜಯಪುರ ಜಿಲ್ಲೆಯಲ್ಲೂ ಬಂದ್ ಕಾವು ಜೋರಾಗಿದೆ. ಜಿಲ್ಲೆಯ ಚಡಚಣ, ಇಂಡಿ, ಮುದ್ದೇಬಿಹಾಳ, ಸಿಂದಗಿ, ಆಲಮೇಲ ಸೇರಿದಂತೆ ಜಿಲ್ಲೆಯ ಹಲವು ಕಡೆ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಇನ್ನೊಂದೆಡೆ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಪ್ರತಿಭಟನೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ನಿರ್ಬಂಧದ ನಡುವೆಯೂ ರೈತರು ತಮ್ಮ ಹೋರಾಟ ಮುಂದುವರಿಸಿದ್ದು, ಜಿಲ್ಲೆಯಲ್ಲಿ ಬಂದ್ ಬಿಸಿ ಹೆಚ್ಚಾಗಿದೆ. ಅಷ್ಟಕ್ಕೂ ವಿಜಯಪುರ ಜಿಲ್ಲೆಯಲ್ಲಿ ಬಂದ್ ಪರಿಸ್ಥಿತಿ ಹೇಗಿದೆ? ರೈತರ ಹೋರಾಟಕ್ಕೆ ಸಾರ್ವಜನಿಕರ ಬೆಂಬಲ ಹೇಗಿದೆ? ಇಲ್ಲಿದೆ ಸಂಪೂರ್ಣ ವರದಿ.
ಹೌದು… ಕಬ್ಬು ಬೆಳೆಗಾರರ ಹಿತ ಕಾಯುವಂತೆ ಹಾಗೂ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಹೋರಾಟದ ಕಣಕ್ಕಿಳಿದಿವೆ. ರಾಜ್ಯಾದ್ಯಂತ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲೂ ಪ್ರತಿಭಟನೆಗಳು ತೀವ್ರಗೊಂಡಿವೆ. ಜಿಲ್ಲೆಯ ಚಡಚಣ ತಾಲೂಕಿನ ತದ್ದೇವಾಡಿ ಗ್ರಾಮದಲ್ಲಿ ಗ್ರಾಮಸ್ಥರು ಸ್ವಯಂಪ್ರೇರಿತವಾಗಿ ಬಂದ್ಗೆ ಬೆಂಬಲ ಸೂಚಿಸಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ರೈತರ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಇನ್ನು ಚಡಚಣ, ಇಂಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಜಳಕಿ ಕ್ರಾಸ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹೋರಾಟಕ್ಕೆ ಬೆಂಬಲ ನೀಡುವಂತೆ ರೈತ ಮುಖಂಡರು ಮನವಿ ಮಾಡಿದ್ದಾರೆ. ಇನ್ನೂ ಮುದ್ದೇಬಿಹಾಳದಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಸ್ಗಳನ್ನು ಡಿಪೋದಲ್ಲಿ ನಿಲ್ಲಿಸಲಾಗಿದೆ. ಅಂಗಡಿ ಮುಂಗಟ್ಟುಗಳೂ ಬಂದ್ ಆಗಿವೆ. ವ್ಯಾಪಾರಸ್ಥರು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇನ್ನೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ, ಧರಣಿ, ಮೆರವಣಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಪಡಿಸುವ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಟೋಲ್ ಪ್ಲಾಜಾಗಳ ಪ್ರವೇಶ ಮತ್ತು ನಿರ್ಗಮನ ಮಾರ್ಗ ಬಂದ್ ಮಾಡದಂತೆ ಹಾಗೂ ಟೋಲ್ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸದಂತೆ ಆದೇಶಿಸಲಾಗಿದೆ. ಆದರೆ, ರೈತ ಸಂಘಟನೆಗಳು ಹೋರಾಟದಿಂದ ಹಿಂದೆ ಸರಿಯುವ ಲಕ್ಷಣ ಕಾಣುತ್ತಿಲ್ಲ. ರಾಷ್ಟ್ರೀಯ ಹೆದ್ದಾರಿ 51 ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ. ಹಿಟ್ನಳ್ಳಿ ಟೋಲ್ ಬಳಿ ಬೆಂಗಳೂರು–ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ. ರೈತರ ಬೇಡಿಕೆಗಳ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳೊಂದಿಗೆ ನಡೆದ ಮಾತುಕತೆಯಲ್ಲೂ ಅಂತಿಮ ಪರಿಹಾರ ಹೊರಬಂದಿಲ್ಲ. ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಗಳಿಂದ 4,500 ರೂಪಾಯಿ ಹಾಗೂ ರಾಜ್ಯ ಸರ್ಕಾರದಿಂದ 1,000 ರೂಪಾಯಿ ಪ್ರೋತ್ಸಾಹಧನ ಸೇರಿದಂತೆ ಒಟ್ಟು 5,500 ರೂಪಾಯಿ ನೀಡ ಬೇಕೆಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ.
ಒಂದೆಡೆ ರೈತರ ಕಬ್ಬಿನ ಬೆಲೆ ಹೋರಾಟ, ಮತ್ತೊಂದೆಡೆ ಜಿಲ್ಲಾಡಳಿತದ ನಿಷೇಧಾಜ್ಞೆ. ಈ ಎರಡರ ನಡುವೆ ವಿಜಯಪುರ ಜಿಲ್ಲೆಯಲ್ಲಿ ಬಂದ್ ಪರಿಸ್ಥಿತಿ ಕುತೂಹಲ ಮೂಡಿಸಿದೆ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸ್ವಯಂಪ್ರೇರಿತ ಬಂದ್ಗೆ ಬೆಂಬಲ ವ್ಯಕ್ತವಾಗಿದ್ದು, ಮುದ್ದೇಬಿಹಾಳದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.
ರೈತರ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ. ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಶಾಂತಿಯುತವಾಗಿ ಹೋರಾಟ ನಡೆಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಒಟ್ಟಿನಲ್ಲಿ, ಕಬ್ಬಿನ ದರದ ವಿಚಾರವಾಗಿ ಆರಂಭವಾದ ಹೋರಾಟ ಇದೀಗ ರಾಜ್ಯವ್ಯಾಪಿ ಬಂದ್ ಸ್ವರೂಪ ಪಡೆದುಕೊಂಡಿದ್ದು, ಸರ್ಕಾರ ರೈತರ ಬೇಡಿಕೆಗಳಿಗೆ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ನಿರ್ಧಾರವಾಗಲಿವೆ.
ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ.
