:ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಚಿಕ್ಕೋಡಿ ತಾಲೂಕಿನ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ ಚಿಂಚಣಿ ಟೋಲ್ ನಾಕಾ ಬಳಿ ರಸ್ತೆ ಮೇಲೆ ಕುರಿಗಳನ್ನು ತಂದು ನಿಲ್ಲಿಸುವ ಮೂಲಕ ವಿನೂತನ ಮಾದರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹೫,೫೦೦ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದ ರೈತ ಮುಖಂಡರು ಸರ್ಕಾರದ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯ ಮಧ್ಯದಲ್ಲೇ ಕುರಿಗಳೊಂದಿಗೆ ಧರಣಿ ಕುಳಿತಿದ್ದರಿಂದ ಕೆಲ ಕಾಲ ವಾಹನ ಸಂಚಾರ ಸಂಪೂರ್ಣ ಸ್ತಬ್ಧಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
ಕಳೆದ ಹಂಗಾಮಿನಲ್ಲಿ ಪೂರೈಸಿದ ಕಬ್ಬಿನ ಬಾಕಿ ಹಣವನ್ನು ತಕ್ಷಣವೇ ರೈತರ ಖಾತೆಗೆ ಜಮಾ ಮಾಡಬೇಕು.ಸಾಲ ಸೂಲ ಮಾಡಿ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ಬೀದಿಗೆ ಬೀಳುವಂತಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕು. ಒಂದು ವೇಳೆ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ದಿನಗಳಲ್ಲಿ ಇನ್ನಷ್ಟು ಉಗ್ರ ಸ್ವರೂಪದ ಹೋರಾಟ ರೂಪಿಸಲಾಗುವುದು ಎಂದು ಪ್ರತಿಭಟನಾನಿರತ ರೈತ ಮುಖಂಡರು ಎಚ್ಚರಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ರೈತರನ್ನು ಸಮಾಧಾನಪಡಿಸಿ ಸಂಚಾರ ಸುಗಮಗೊಳಿಸಲು ಪ್ರಯತ್ನಿಸಿದರು.
