ಕಪ್ಪ ಕೇಳಿದ ಬ್ರಿಟಿಷರ ವಿರುದ್ಧ ರಣಕಹಳೆ ಮೊಳಗಿಸಿ ವಿಜಯ ಸಾಧಿಸಿದ ವೀರರಾಣಿ ಕಿತ್ತೂರು ಚನ್ನಮ್ಮನ ಐತಿಹಾಸಿಕ 202ನೇ ವಿಜಯೋತ್ಸವ ಮತ್ತು ಕಿತ್ತೂರು ಉತ್ಸವ-2026ಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.

ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಜಿಲ್ಲಾ ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರು ಕಿತ್ತೂರು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಬರಮಾಡಿಕೊಂಡು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ನಂತರ ಪುಷ್ಪಾಲಂಕೃತ ಅಶ್ವಾರೂಢ ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.

ಉತ್ಸವದ ಅಂಗವಾಗಿ ಆಯೋಜಿಸಿದ್ದ ಆಕರ್ಷಕ ಜಾನಪದ ಕಲಾವಾಹಿನಿಗೆ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್ಪಿ ಕೆ ರಾಮರಾಜನ್ ಇನ್ನುಳಿದ ಗಣ್ಯರು ಚಾಲನೆಯನ್ನು ನೀಡಿದರು.

ಉತ್ಸವದ ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ಕೋಲಾಟ ಆಡುವ ಮೂಲಕ ಜನರ ಗಮನ ಸೆಳೆದರು. ಜಾನಪದ ಕಲಾವಾಹಿನಿಯಲ್ಲಿ ಚಂಡಿಮೇಳ, ಮಹಿಳಾ ವೀರಗಾಸೆ, ಈಶ್ವರ ವೇಷ, ಗಾರುಡಿ ಗೊಂಬೆ, ಮೀನು ನೃತ್ಯ, ಮಹಿಳಾ ಡೊಳ್ಳು ಕುಣಿತ, ಚೆಂಡೆವಾದ್ಯ, ಕುದುರೆ ಕುಣಿತ, ಕಂಸಾಳೆ, ನಂದಿಧ್ವಜ, ವೀರಗಾಸೆ, ಪೂಜಾ ಕುಣಿತ, ಡೊಳ್ಳು ಕುಣಿತ, ಕರಡಿಮಜಲು, ಕಂಸಾಳೆ, ಜಗ್ಗಲಗಿ ಸೇರಿದಂತೆ ವಿವಿಧ ಪ್ರಕಾರಗಳ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಜನಮನ ಆಕರ್ಷಿಸಿದವು. ಅಲ್ಲದೇ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಕೂಡ ಮೆರವಣಿಗೆಯಲ್ಲಿ ಪಾಲ್ಗೊಂಡು ಸರ್ಕಾರದ ವಿವಿಧ ಯೋಜನೆಗಳು, ಸೇವಾಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿದವು.

ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಆರಂಭಗೊಂಡ ಜಾನಪದ ಕಲಾವಾಹಿನಿಯು ನಿಚ್ಚಣಿಕಿ ಮಠದ ಆವರಣದವರೆಗೆ ಸಂಚರಿಸಿತು.
