ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಚುನಾವಣೆಯ ಕಾವು ವಿಜಯಪುರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಜಾಣಗೆರೆ ವೆಂಕಟರಾಮಯ್ಯ ಅವರ ಪರವಾಗಿ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಪತ್ರಿಕಾಗೋಷ್ಠಿ ನಡೆಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಹಿರಿಯ ಸಾಹಿತಿ ನಾಗತಿಹಳ್ಳಿ ನಾಗರಾಜ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆ ಗಳಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಇರಬಾರದು ಎಂದು ಪ್ರತಿಪಾದಿಸಿದರು. ನಿಕಟಪೂರ್ವ ಅಧ್ಯಕ್ಷರ ಆಡಳಿತ ವೈಖರಿ ಹಾಗೂ ರಾಜಕೀಯ ಪಕ್ಷಗಳ ಬೆಂಬಲದೊಂದಿಗೆ ಪರಿಷತ್ತಿನ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ನಡೆದಿದೆ ಎಂದು ಆರೋಪಿಸಿದ ಅವರು, ಇದರಿಂದ ಕಸಾಪದ ಸ್ವಾಯತ್ತತೆಗೆ ಧಕ್ಕೆಯಾಗಿದೆ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮೂಲ ಆಶಯಗಳಿಗೆ ಧಕ್ಕೆ ತರುವಂತಹ ಹಲವು ಬೆಳವಣಿಗೆಗಳು ಕಳೆದ ಕೆಲವು ವರ್ಷಗಳಲ್ಲಿ ನಡೆದಿವೆ. ಕಸಾಪ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸ ಬೇಕು ಎಂದು ಅವರು ಅಭಿಪ್ರಾಯಪಟ್ಟರು. ಇದೇ ವೇಳೆ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ, ಪರಿಷತ್ತಿನ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಹಲವು ಕಾರ್ಯಯೋಜನೆಗಳನ್ನು ರೂಪಿಸಿರುವುದಾಗಿ ತಿಳಿಸಿದರು.
ಕನ್ನಡ ನಿಘಂಟು ಕ್ರಿಯಾ ಯೋಜನೆಯನ್ನು ಮರು ಆರಂಭಿಸುವುದು, ‘ಕನ್ನಡ ನುಡಿ’ ಮುಖವಾಣಿ ಪತ್ರಿಕೆಯನ್ನು ಪುನರಾರಂಭಿಸುವುದು, ಸಾಹಿತ್ಯ ರಚನಾ ಕಮ್ಮಟಗಳನ್ನು ಆಯೋಜಿಸುವುದು ಹಾಗೂ ಪುಸ್ತಕ ಸಂತೆಗಳನ್ನು ಮತ್ತೆ ಆರಂಭಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸುವ ಸಂಕಲ್ಪ ದೊಂದಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರತಿನಿಧಿ ಸಂಸ್ಥೆಯಾಗಿದ್ದು, ಅದರ ಸ್ವಾಯತ್ತತೆ ಹಾಗೂ ಮೂಲ ಆಶಯಗಳನ್ನು ಉಳಿಸುವುದು ಪ್ರಮುಖವಾಗಿದೆ ಎಂಬ ಅಭಿಪ್ರಾಯವನ್ನು ಪತ್ರಿಕಾಗೋಷ್ಠಿಯಲ್ಲಿ ವ್ಯಕ್ತಪಡಿಸಿದರು.
