Belagavi

ರೈತರ ಪರ ಕೆಲಸ ಮಾಡಲು ತಾಕತ್ತಿಲ್ಲದಿದ್ದರೆ ರಾಜೀನಾಮೆ ನೀಡಿ ಇಲ್ಲವೇ ಎಲ್ಲಮ್ಮನ ಗುಡ್ಡಕ್ಕೆ ಹೋಗಿ ಜೋಗಪ್ಪರಾಗಿ; ದಿಂಗಾಲೇಶ್ವರ ಸ್ವಾಮೀಜಿ

Share

ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಶಿರಹಟ್ಟಿ ಫಕಿರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳು ಭೇಟಿ ನೀಡಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತರ ಹಿತ ಕಾಯಲು ಮಠಾಧಿಪತಿಗಳೇ ಬೀದಿಗಿಳಿದು ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರೈತರ ಪರ ಕೆಲಸ ಮಾಡಲು ತಾಕತ್ತಿಲ್ಲದಿದ್ದರೆ ರಾಜೀನಾಮೆ ನೀಡಿ ಇಲ್ಲವೇ ಎಲ್ಲಮ್ಮನ ಗುಡ್ಡಕ್ಕೆ ಹೋಗಿ ಜೋಗಪ್ಪರಾಗಿ ಎಂದಿದ್ದಾರೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ಕಬ್ಬು ಬೆಳೆಗಾರರು ನ್ಯಾಯಯುತ ಬೆಲೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಉಗ್ರ ಹೋರಾಟಕ್ಕೆ ಶಿರಹಟ್ಟಿ ಫಕಿರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳು ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸ್ವಾಮೀಜಿಗಳು, ಪೆಟ್ರೋಲ್ ಬೆಲೆ ಏರಿಕೆಗೆ ಯಾವುದೇ ಸಮಿತಿಗಳ ಅವಶ್ಯಕತೆ ಇಲ್ಲದ ಸರ್ಕಾರಕ್ಕೆ, ಅನ್ನದಾತರ ಕಬ್ಬಿನ ಬೆಲೆ ನಿಗದಿ ಮಾಡಲು ಮಾತ್ರ ಮೀನಾಮೇಷ ಎಣಿಸುತ್ತಿದೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರೈತರ ಹೋರಾಟದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕಿಡಿಕಾರಿದ ಅವರು, ಮಠಾಧಿಪತಿಗಳು ಮಠ ಬಿಟ್ಟು ಹೊರಬಂದು ರೈತರಿಗೆ ಬೆನ್ನೆಲುಬಾಗಿ ನಿಲ್ಲುವ ಕಾಲ ಬಂದಿದೆ ಎಂದು ಕರೆ ನೀಡಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ವಿರುದ್ಧವೂ ಕಟುಶಬ್ದಗಳಲ್ಲಿ ವಾಗ್ದಾಳಿ ನಡೆಸಿದ ಅವರು, ರೈತರ ಪರ ಕೆಲಸ ಮಾಡಲು ತಾಕತ್ತಿಲ್ಲದಿದ್ದರೆ ರಾಜೀನಾಮೆ ನೀಡಿ ಇಲ್ಲವೇ ಎಲ್ಲಮ್ಮನ ಗುಡ್ಡಕ್ಕೆ ಹೋಗಿ ಜೋಗಪ್ಪರಾಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರು ಯಾವುದೇ ಮುಲಾಜಿಗೆ ಒಳಗಾಗದೆ, ಬೇಡಿಕೆ ಈಡೇರುವವರೆಗೆ ಶಾಂತಿಯುತವಾಗಿ ಹೋರಾಟ ಮುಂದುವರಿಸುವಂತೆ ಸ್ವಾಮೀಜಿಗಳು ಧೈರ್ಯ ತುಂಬಿದರು.

Tags:

error: Content is protected !!