Belagavi

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಆಕ್ರೋಶ: ರೈತರ ಸಂಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

Share

ಕಬ್ಬು ಬೆಳೆಗಾರರ ಉಗ್ರ ಹೋರಾಟ ತೀವ್ರಗೊಂಡ ಬೆನ್ನಲ್ಲೇ ಬೆಳಗಾವಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರೈತರ ಸಮಸ್ಯೆ ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ಜೊತೆ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸ್ಥಳೀಯ ನಾಯಕರು ಹಾಗೂ ಜಿಲ್ಲಾಡಳಿತದಿಂದ ಆತ್ಮೀಯ ಸ್ವಾಗತ ಮತ್ತು ಗೌರವ ರಕ್ಷೆ ನೀಡಲಾಯಿತು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಸಾವಿರಾರು ರೈತರು ನಡೆಸುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರದ ಪ್ರತಿನಿಧಿಗಳನ್ನು ದೆಹಲಿಗೆ ಕಳುಹಿಸಲಾಗಿದ್ದು, ಈ ವಿಚಾರವಾಗಿ ಕೇಂದ್ರ ಸರ್ಕಾರದ ಸಮಿತಿಯೊಂದಿಗೆ ಹಾಗೂ ಸಂಸದರ ಮೂಲಕ ಚರ್ಚೆ ಮುಂದುವರಿದಿದೆ ಎಂದು ತಿಳಿಸಿದರು.

ಕಳೆದ ಹತ್ತು-ಹನ್ನೆರಡು ವರ್ಷಗಳಿಂದ ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೆಯೇ ಉಳಿದುಕೊಂಡಿದ್ದು, ಸಕ್ಕರೆ ಬೆಲೆಯಲ್ಲಿ ನಿರೀಕ್ಷಿತ ಏರಿಕೆಯಾಗದಿರುವುದು ಕಾರ್ಖಾನೆಗಳಿಗೂ ಸಂಕಷ್ಟ ತಂದಿಟ್ಟಿದೆ ಎಂದು ಸಿಎಂ ವಿವರಿಸಿದರು. ರೈತರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಮಸ್ಯೆಗಳನ್ನು ಸಮಗ್ರವಾಗಿ ಆಲಿಸಿ, ಎಲ್ಲರ ಸಭೆ ನಡೆಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಹಾಗೂ ರಾಮದುರ್ಗ ಶಾಸಕ ಅಶೋಕ್ ಪಟ್ಟಣ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Tags:

error: Content is protected !!