ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಅವರೊಳ್ಳಿ ಗ್ರಾಮದಿಂದ ಬಿಳಕಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯು ಮಹತ್ವದ ಮಾಹಿತಿ ನೀಡಿದೆ.
ಈ ಕುರಿತು ಖಾನಾಪೂರ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಅರ್ಜಿದಾರರಾದ ಕಾಂಗ್ರೆಸ್ ಯುವ ಮುಖಂಡ ಭರತೇಶ ತೋರೋಜಿ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ. 05-10-2026ರಂದುಪ್ರಜಾ ಸೇವಾ ಕಾರ್ಯಕ್ರಮದಲಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ 12-10-2026ರಂದು ಈ ಪತ್ರವನ್ನು ನೀಡಲಾಗಿದೆ.
ಪತ್ರದಲ್ಲಿನ ಮಾಹಿತಿಯ ಪ್ರಕಾರ, ಅವರೊಳ್ಳಿ ಗ್ರಾಮದಿಂದ ಬಿಳಕಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಇಲಾಖೆಯ ದಾಖಲೆಗಳಲ್ಲಿ ಮಾಹಿತಿ ಲಭ್ಯವಿದೆ. ಸದರಿ ರಸ್ತೆ ಲೋಕೋಪಯೋಗಿ ಇಲಾಖೆಯ ಖಾನಾಪೂರ ಉಪವಿಭಾಗದ ವ್ಯಾಪ್ತಿಗೆ ಒಳಪಟ್ಟಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ₹330 ಲಕ್ಷಗಳ ಅನುದಾನದ ಉಲ್ಲೇಖವಿದೆ.
ಈ ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗದ ಜನರಿಗೆ ಸಂಚಾರ ಸೌಲಭ್ಯ ಸುಧಾರಿಸುವುದರ ಜೊತೆಗೆ, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.
ರಸ್ತೆ ಅಭಿವೃದ್ಧಿ ಕಾಮಗಾರಿಯು ಯಾವ ಹಂತದಲ್ಲಿದೆ, ಕಾಮಗಾರಿ ಯಾವಾಗ ಪ್ರಾರಂಭವಾಗಲಿದೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿದೆಯೇ ಎಂಬುದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡಬೇಕೆಂದು ಸಾರ್ವಜನಿಕರು ನಿರೀಕ್ಷಿಸುತ್ತಿದ್ದಾರೆ.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
