ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯಲ್ಲಿ ರೈತರ ಹೋರಾಟದ ಕಿಚ್ಚು ಜೋರಾಗಿದೆ. ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸಿ ಜಿಲ್ಲೆಯಾದ್ಯಂತ ಕಬ್ಬು ಬೆಳೆಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳನ್ನು ತಡೆದು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಇನ್ನು ಕೆಲವೆಡೆ ರಸ್ತೆಯ ಮೇಲೆ ಮುಳ್ಳು ಕಂಟಿಗಳನ್ನು ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮನವೊಲಿಸಲು ಪ್ರಯತ್ನಿಸಿದರೂ ರೈತರು ಮಾತ್ರ ತಮ್ಮ ಪಟ್ಟು ಸಡಿಲಿಸಿಲ್ಲ. ವಿಜಯಪುರ ಜಿಲ್ಲೆಯ ವಿವಿಧೆಡೆ ನಡೆದ ರೈತರ ಹೋರಾಟದ ಸಂಪೂರ್ಣ ಚಿತ್ರಣ ಇಲ್ಲಿದೆ ನೋಡಿ.

ಹೌದು… ವಿಜಯಪುರ ನಗರದ ಹೊರವಲಯದ ಟೋಲ್ ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ಹೊರಹಾಕಿದರು. ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರೈತರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಅಧಿಕಾರಿಗಳ ಮನವಿಗೂ ಜಗ್ಗದ ರೈತರು ತಮ್ಮ ಹೋರಾಟ ಮುಂದುವರಿಸಿದರು. ಇನ್ನು ಬಬಲೇಶ್ವರ ಪಟ್ಟಣದ ಶಾಂತವೀರ ಸರ್ಕಲ್ನಲ್ಲಿ ಕಬ್ಬು ಬೆಳೆಗಾರರು ಧಾರವಾಡ-ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಮುದ್ದೇಬಿಹಾಳ ಪಟ್ಟಣದಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿತ್ತು. ನಿಡಗುಂದಿ ಪಟ್ಟಣದಲ್ಲಿ ರೈತರು ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವಂತೆ ವ್ಯಾಪಾರಸ್ಥರಲ್ಲಿ ಮನವಿ ಮಾಡಿದರು. ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಇನ್ನು ಕಬ್ಬಿನ ಬೆಂಬಲ ಬೆಲೆ ಅಂದರೆ ಎಂಎಸ್ಪಿ ಪ್ರಮಾಣವನ್ನು ಹೆಚ್ಚಿಸಬೇಕು. ರಾಜ್ಯ ಸರ್ಕಾರ ರಾಜ್ಯ ಪರಾಮರ್ಶಿತ ಬೆಲೆ (SAP) ಅಡಿಯಲ್ಲಿ ಪ್ರತಿ ಟನ್ಗೆ 1,000 ರೂಪಾಯಿ ಪ್ರೋತ್ಸಾಹ ಧನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಹೋರಾಟ ನಡೆಸುತ್ತಿದ್ದಾರೆ. ಇನ್ನು ಕೆಲವೆಡೆ ರಸ್ತೆಯ ಮೇಲೆ ಮುಳ್ಳು ಕಂಟಿಗಳನ್ನು ಹಾಕಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಯಿತು. ಇದರಿಂದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ರಸ್ತೆಯ ಎರಡೂ ಬದಿಗಳಲ್ಲಿ ನೂರಾರು ಸರಕು ಸಾಗಣೆ ಲಾರಿಗಳು, ಕೆಎಸ್ಆರ್ಟಿಸಿ ಬಸ್ಗಳು ಹಾಗೂ ಖಾಸಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ತಮ್ಮ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡರು ಪಟ್ಟು ಹಿಡಿದಿದ್ದಾರೆ.

ಒಟ್ಟಿನಲ್ಲಿ ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ವಿಜಯಪುರ ಜಿಲ್ಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಕರ್ನಾಟಕ ಬಂದ್ಗೆ ಬೆಂಬಲವಾಗಿ ಹೆದ್ದಾರಿ ತಡೆ, ರಸ್ತೆ ಬಂದ್ ಸೇರಿದಂತೆ ವಿವಿಧ ರೀತಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಈಗಲಾದರೂ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಸಮಸ್ಯೆ ಬಗೆಹರಿಸುತ್ತದೆಯೇ? ಅಥವಾ ರೈತರ ಹೋರಾಟ ಇನ್ನಷ್ಟು ಉಗ್ರ ಸ್ವರೂಪ ಪಡೆದುಕೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ.
