Dharwad

ಧಾರವಾಡದಲ್ಲಿ ಬಿಸಿ ಮುಟ್ಟಿಸಿದ ಕಬ್ಬು ಬೆಳೆಗಾರರ ಆಕ್ರೋಶ: ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ

Share

ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ದರ ನಿಗದಿಪಡಿಸುವುದು, ಎಸ್‌ಎಪಿ ಹಾಗೂ ಎಫ್‌ಆರ್‌ಪಿ ದರ ಹೆಚ್ಚಳಕ್ಕೆ ಆಗ್ರಹಿಸಿ ಕಬ್ಬು ಬೆಳೆಗಾರರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಧಾರವಾಡ ಜಿಲ್ಲೆಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ರೈತರು ರಸ್ತೆ ತಡೆ ನಡೆಸಿದ್ದು, ಸ್ಥಳದಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ಸಂಪೂರ್ಣ ವ್ಯತ್ಯಯಗೊಂಡಿದೆ.

ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಧಾರವಾಡ ಜಿಲ್ಲಾಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ 4ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ಬೆಳಗಾವಿ ಗಡಿ ಭಾಗದ ತೇಗೂರು ಗ್ರಾಮದಿಂದ ಹುಬ್ಬಳ್ಳಿ ತಾಲೂಕಿನ ವರೂರ ಗ್ರಾಮದವರೆಗೆ ಹೆದ್ದಾರಿ ತಡೆ ನಡೆಸುವ ಸಾಧ್ಯತೆಯಿದೆ ಎಂದು ಧಾರವಾಡ ಎಸ್‌ಪಿ ನೀಡಿದ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ, ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ರೈತರ ಆಕ್ರೋಶ ಮುಗಿಲುಮುಟ್ಟಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರು ಉಗ್ರ ಪ್ರತಿಭಟನೆ ದಾಖಲಿಸುತ್ತಿದ್ದಾರೆ.
ಮತ್ತೊಂದೆಡೆ ಧಾರವಾಡದ ಅಳ್ನಾವರ ತಾಲೂಕಿನ ಹೊನ್ನಾಪುರ ಗ್ರಾಮಸ್ಥರು ಧಾರವಾಡದಿಂದ ಗೋವಾಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ರಸ್ತೆಯಿಡೀ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಾರ್ವಜನಿಕರ ಹಾಗೂ ವಾಹನ ಸವಾರರ ಪರದಾಟ ಹೆಚ್ಚಾಗಿದೆ. ಬಂದ್ ಕರೆಗೆ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ಬೆಂಬಲ ವ್ಯಕ್ತವಾಗುತ್ತಿದ್ದು, ಸರ್ಕಾರ ತಕ್ಷಣವೇ ಸ್ಪಂದಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡರು ಎಚ್ಚರಿಸಿದ್ದಾರೆ.

Tags:

error: Content is protected !!