ರಾಜ್ಯ ಸರ್ಕಾರ ಆಯ್ಕೆ ಮಾಡಿದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಅವರ ಮೂಲಕವೇ ಎಸ್‌ಐಆರ್ (SIR) ಕಾರ್ಯ ನಡೆಯುತ್ತಿದೆ. ಆದರೆ, ತಾವು ಆಯ್ಕೆ ಮಾಡಿ ಅಧಿಕಾರ ಕೊಟ್ಟವರ ಮೇಲೆಯೇ ಮುಖ್ಯಮಂತ್ರಿಗಳಿಗೆ ನಂಬಿಕೆ ಇಲ್ಲದಿರುವುದು ವಿಪರ್ಯಾಸ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಧಾರವಾಡದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಎಸ್.ವಿ. ಸಂಕನೂರು ಅವರ ನಾಮಪತ್ರ ರೋಡ್‌ಶೋ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಫಾರ್ಮ್ ನಂಬರ್ 7 ಮುಂದಿಟ್ಟುಕೊಂಡು ಅರಾಜಕತೆ ಸೃಷ್ಟಿಸಲು ಹೊರಟಿದೆ. ರಾಜ್ಯ ಸರ್ಕಾರದ ಹತೋಟಿಯಲ್ಲೇ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆಯೇ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.
ಇದೇ ವೇಳೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಲಬುರಗಿ ಭಾಗದಲ್ಲಿ ಎಷ್ಟು ಕೊಲೆಗಳಾಗಿವೆ ಎಂಬುದನ್ನು ಮೊದಲು ಪರಿಶೀಲಿಸಲಿ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ದೂರು ದಾಖಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಾರಿಗೆ ಸಂಸ್ಥೆಗಳಿಗೆ ಬರಬೇಕಾದ 6 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣ ಬಾಕಿ ಇದೆ. ಗ್ಯಾರಂಟಿಗಳಿಗೆ ಹಣ ಕ್ರೋಢೀಕರಿಸಲು ಆಗದೆ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಲಾಗಿದ್ದು, ರಾಜ್ಯವನ್ನು ಕುಡುಕರ ರಾಜ್ಯವನ್ನಾಗಿ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಟೀಕಿಸಿದರು.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮುಖಂಡರ ನಡುವಿನ ಭಿನ್ನಾಭಿಪ್ರಾಯಗಳು ಮತ್ತು ಬಂಡಾಯದ ಕುರಿತು ಮಾತನಾಡಿ, ರಾಜಕಾರಣ ಬೇರೆ, ಪ್ರತಿಭಟನೆಗೆ ಬೆಂಬಲಿಸುವುದು ಬೇರೆ ಎಂದರು.
