ಟೋಲ್ ಪ್ಲಾಜಾಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಶುಲ್ಕ ಕೇಂದ್ರ ಸಂಪೂರ್ಣ ನುಜ್ಜುಗುಜ್ಜಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಬಳಿ ನಡೆದಿದೆ.


ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಬರುವ ಕನ್ನೊಳ್ಳಿ ಟೋಲ್ ಪ್ಲಾಜಾಗೆ ಇಂದು ನಸುಕಿನ ಜಾವ ಟಿಪ್ಪರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಸೇರಿದ ಟೋಲ್ ಪ್ಲಾಜಾ ಸಂಪೂರ್ಣ ಹಾನಿಗೊಳಗಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅಪಘಾತದಿಂದ ವಿಜಯಪುರ– ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ವಿಷಯ ತಿಳಿದು ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿಪ್ಪರ್ನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
