ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬುಡಮೇಲು ಮಾಡಲು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸಂಚು ರೂಪಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಅವರು, ಇವಿಎಂಗಳನ್ನು ಕೈಬಿಟ್ಟು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಜಾಪ್ರಭುತ್ವವನ್ನು ನಾಶಮಾಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸಂಚು ರೂಪಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ರಾಹುಲ್ ಗಾಂಧಿ ಅವರು ಆರಂಭದಿಂದಲೂ ಮತ ಕಳ್ಳತನ ಮತ್ತು ಇವಿಎಂ ದೋಷಗಳ ಬಗ್ಗೆ ಧ್ವನಿ ಎತ್ತಿದ್ದರು, ಆದರೆ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈಗ ಸ್ವತಃ ಚುನಾವಣಾ ಆಯುಕ್ತರೇ ಸತ್ಯವನ್ನು ಬಹಿರಂಗಪಡಿಸಿದ್ದು, ಜ್ಞಾನೇಶ್ ಕುಮಾರ್ ಅವರು ಕೆಲವರ ಸೂಚನೆಯಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು. ಪ್ರತಿಭಟನೆಯನ್ನು ಹತ್ತಿಕ್ಕಲು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದ್ದು, ಅಸಲಿ ತುರ್ತು ಪರಿಸ್ಥಿತಿಯ ಕಾಲದಲ್ಲೂ ರೈಲು ಮತ್ತು ವಿಮಾನ ಸೇವೆಗಳು ಬಂದ್ ಆಗಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ಕಾಂಗ್ರೆಸ್ ಹಾಗೂ ‘ಇಂಡಿಯಾ’ ಮೈತ್ರಿಕೂಟ ಹೋರಾಟ ನಡೆಸುತ್ತಿದೆ ಎಂದ ಖರ್ಗೆ, ನಾಳೆ ಸಂಜೆ 5 ರಿಂದ 6 ಗಂಟೆಯೊಳಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ ದೂರು ಸಲ್ಲಿಸಲು ಸಮಯ ಕೋರಲಾಗಿದೆ ಎಂದರು. ಮೋದಿ ಅವರು ಜನರ ಮತಗಳಿಂದ ಅಲ್ಲ, ಇವಿಎಂ ಬಳಸಿ ಪ್ರಧಾನಿಯಾಗಿದ್ದಾರೆ ಎಂದು ಟೀಕಿಸಿದ ಅವರು, ಕೂಡಲೇ ಇವಿಎಂಗಳನ್ನು ಕೈಬಿಟ್ಟು ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆಗಳನ್ನು ನಡೆಸಬೇಕು ಎಂದು ಬಲವಾಗಿ ಒತ್ತಾಯಿಸಿದರು.
