ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸೋತಾಗ ಮಾತ್ರ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಆರೋಪಿಸುತ್ತದೆ. ಜನರ ತೀರ್ಪನ್ನು ಒಪ್ಪಿಕೊಳ್ಳುವ ಬದಲು ಚುನಾವಣಾ ಆಯೋಗ, ಇವಿಎಂ ಹಾಗೂ ಎಸ್ಐಆರ್ ವಿರುದ್ಧ ದೂರುತ್ತಿದೆ. ರಾಹುಲ್ ಗಾಂಧಿ ಅವರ ನಾಯಕತ್ವ ಬದಲಾವಣೆಯಾಗದಿದ್ದರೆ ಕಾಂಗ್ರೆಸ್ಗೆ ಗೆಲುವು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವತಿಯಿಂದ ದೇಶಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ 59ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳಲ್ಲಿ ಸೋತಿದ್ದರೂ ಆತ್ಮಾವಲೋಕನ ಮಾಡಿಕೊಳ್ಳುತ್ತಿಲ್ಲ. ಕೇರಳ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಗೆದ್ದಾಗ ಚುನಾವಣಾ ಆಯೋಗದ ಬಗ್ಗೆ ಮಾತನಾಡುವುದಿಲ್ಲ. ಸೋತಾಗ ಮಾತ್ರ ಆರೋಪ ಮಾಡುತ್ತದೆ ಎಂದರು.
ಮತದಾರರ ಪಟ್ಟಿಯಲ್ಲಿನ ನಕಲಿ ಮತದಾರರು, ಮೃತಪಟ್ಟವರ ಹೆಸರು ಹಾಗೂ ಎರಡು ಕಡೆ ನೋಂದಣಿಯಾಗಿರುವ ಮತದಾರರನ್ನು ತೆಗೆದುಹಾಕುವುದು ತಪ್ಪೇ? ಎಸ್ಐಆರ್ನಲ್ಲಿ ಲೋಪಗಳಿದ್ದರೆ ತನಿಖೆ ನಡೆಸಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಚುನಾವಣಾ ಅಕ್ರಮಗಳ ಬಗ್ಗೆ ದೂರುಗಳಿದ್ದರೆ ನ್ಯಾಯಾಲಯದ ಮೊರೆ ಹೋಗಲಿ ಎಂದು ಹೇಳಿದರು.
ಬ್ಯಾಲೆಟ್ ಪೇಪರ್ ಮೂಲಕ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವನ್ನೂ ಕಾಂಗ್ರೆಸ್ ಒಪ್ಪಿಕೊಳ್ಳುತ್ತಿಲ್ಲ. ಗೆದ್ದಾಗ ಚುನಾವಣೆ ಸರಿಯಾಗಿದೆ, ಸೋತಾಗ ಅಕ್ರಮ ನಡೆದಿದೆ ಎನ್ನುವುದು ಕಾಂಗ್ರೆಸ್ನ ದ್ವಂದ್ವ ನೀತಿ. ಬಾಂಗ್ಲಾದೇಶ, ನೇಪಾಳದ ಮಾದರಿಯಲ್ಲಿ ಗಲಭೆ ಸೃಷ್ಟಿಸುವ ಮಾತುಗಳು ಅಪಾಯಕಾರಿ ಎಂದರು.
ರಾಜ್ಯ ಸರ್ಕಾರ ಹಾಲಿನ ದರ ಸೇರಿದಂತೆ ಹಲವು ಬಾರಿ ಬೆಲೆ ಏರಿಕೆ ಮಾಡಿ ಬಡವರ ಮೇಲೆ ಹೊರೆ ಹಾಕಿದೆ. ರೈತರಿಗೆ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ನಿಯಮದಡಿ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರಕ್ಕೆ ಬಿಡುಗಡೆಯಾದ ಹಣದ ಲೆಕ್ಕವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ 149 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮೀಣ ಅಧ್ಯಕ್ಷ ನಿಂಗಪ್ಪ ಸುತ್ತಗಟ್ಟಿ, ಎಂ. ನಾಗರಾಜ್, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಲಿಂಗರಾಜ ಪಾಟೀಲ, ಜಯತೀರ್ಥ ಕಟ್ಟಿ, ಸುಭಾಷ್ ಪಾಟೀಲ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
