ರಾಜ್ಯ ಸರಕಾರ ಹಾಲಿನ ದರ ಸೇರಿದಂತೆ ಅಗತ್ಯ ದಿನಸಿ ಬೆಲೆ ಏರಿಕೆ ಮಾಡಿರುವುದು ಹಾಗೂ ಬರಗಾಲ ನಿರ್ವಹಣೆ ಮಾಡುವುದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬೆಳಗಾವಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಚನ್ನಮ್ಮ ವೃತ್ತದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ರೈತರು ಬರಗಾಲದ ಪರಿಣಾಮವಾಗಿ ಕೃಷಿ ಚಟುವಟಿಕೆಗಳಲ್ಲಿ ನಷ್ಟ ಅನುಭವಿಸುತ್ತಿದ್ದು, ಬೆಳೆ ಹಾನಿ, ನೀರಿನ ಅಭಾವ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಸಮರ್ಪಕ ಪರಿಹಾರ ಒದಗಿಸಿ, ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಾದ ಸರಕಾರ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರಕಾರ ಬೆಲೆ ಏರಿಕೆ ನಿಯಂತ್ರಿಸುವ ಬದಲು ಜನರ ಮೇಲೆ ಹೆಚ್ಚುವರಿ ಹೊರೆ ಹಾಕುತ್ತಿದೆ. ರೈತರ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸುವಲ್ಲಿಯೂ ನಿರ್ಲಕ್ಷ್ಯ ವಹಿಸುತ್ತಿದೆ. ಸರಕಾರದ ಇಂತಹ ಧೋರಣೆಯಿಂದ ಸಾಮಾನ್ಯ ಜನರು ಹಾಗೂ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.

ನಹಾಲಿನ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಜನಸಾಮಾನ್ಯರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಬರಗಾಲದಿಂದ ಸಂಕಷ್ಟಕ್ಕೀಡಾದ ರೈತರಿಗೆ ಸೂಕ್ತ ಪರಿಹಾರ ನೀಡುವ ಮೂಲಕ ಕೃಷಿ ಕ್ಷೇತ್ರಕ್ಕೆ ನೆರವಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ನಾಸೀರ್ ಭಾಗವಾನ, ಪ್ರತಾಪ್ ಸಿಂಹ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
