ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜನವಾಡ ಗ್ರಾಮದಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ನಿನ್ನೆ ರಾತ್ರಿ ಜನವಾಡದಿಂದ ಸತ್ತಿ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯ ಮಧ್ಯದಲ್ಲಿರುವ ಪಟೇಲರ ತೋಟದಲ್ಲಿ ರೈತರು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದೊಡ್ಡ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ರೈತರು ತಕ್ಷಣ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದು, ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.

ಕೂಡಲೇ ಗ್ರಾಮಸ್ಥರು ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಗ್ರಾಮದ ಯುವಕರ ಸಹಕಾರದೊಂದಿಗೆ ಮೊಸಳೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅತ್ಯಂತ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮೊಸಳೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಬಳಿಕ ಅದನ್ನು ಸುರಕ್ಷಿತವಾಗಿ ಬೇರೆ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.
ಅಧಿಕಾರಿಗಳ ಸಮಯಪ್ರಜ್ಞೆ ಹಾಗೂ ಗ್ರಾಮದ ಯುವಕರ ಸಹಕಾರದಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಮೊಸಳೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಆತಂಕದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
