ಗುಜರಾತಿನ ಪಟೇಲ್ ಸಮಾಜದ ಮಕ್ಕಳಿಗಾಗಿ ನಿರ್ಮಿಸಲಾಗಿರುವ ಸರದಾರ ಧಾಮದ ಮಾದರಿಯಲ್ಲಿ, ಕರ್ನಾಟಕದ ಗ್ರಾಮೀಣ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಉದ್ದೇಶದಿಂದ ಬೆಳಗಾವಿ-ಧಾರವಾಡ ಮಧ್ಯಭಾಗದಲ್ಲಿ ಬಸವಧಾಮ ಸ್ಥಾಪಿಸಲಾಗುವುದು ಎಂದು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ತಿಳಿಸಿದರು.
ಬೆಳಗಾವಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ಒದಗಿಸುವುದು ಬಸವಧಾಮದ ಪ್ರಮುಖ ಉದ್ದೇಶವಾಗಿದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದರು.
ಸುಮಾರು 140ರಿಂದ 150 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಸಾಕಾರಗೊಳ್ಳಲಿದೆ. ಈಗಾಗಲೇ ಬಸವಧಾಮ ಸಂಸ್ಥೆಯ ಕಂಪನಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 80ಜಿ ಮತ್ತು 12ಎ ಅಡಿಯಲ್ಲಿ ತೆರಿಗೆ ವಿನಾಯಿತಿ ಸೌಲಭ್ಯವೂ ದೊರೆತಿದೆ. ಮುಂದಿನ 8ರಿಂದ 10 ದಿನಗಳಲ್ಲಿ ಯೋಜನೆಯ ಕಾರ್ಯಾರಂಭವಾಗಲಿದೆ ಎಂದು ತಿಳಿಸಿದರು.
ಈ ಯೋಜನೆಗೆ ಈಗಾಗಲೇ ಅನೇಕ ಗಣ್ಯರು ಹಾಗೂ ದಾನಿಗಳು ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಆಸಕ್ತರು ಹಣದ ರೂಪದಲ್ಲಿ ಅಥವಾ ಅಗತ್ಯ ವಸ್ತುಗಳ ಮೂಲಕ ದೇಣಿಗೆ ನೀಡಬಹುದು. ಸಮಾಜದ ಸಹಕಾರದೊಂದಿಗೆ ಈ ಬೃಹತ್ ಯೋಜನೆಯನ್ನು ಯಶಸ್ವಿಗೊಳಿಸಲಾಗುವುದು ಎಂದರು.
ಗ್ರಾಮೀಣ ಭಾಗದ ಪ್ರತಿಭೆಗಳು ಆರ್ಥಿಕ ಅಡಚಣೆಯಿಂದ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅವಕಾಶಗಳಿಂದ ವಂಚಿತರಾಗಬಾರದು. ಬಸವಧಾಮವು ಅಂತಹ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಲು ಮಹತ್ವದ ವೇದಿಕೆಯಾಗಲಿದೆ ಎಂದು ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.
