Belagavi

ಬೆಳಗಾವಿ: ಕಬ್ಬಿಗೆ ₹5,500 ಬೆಂಬಲ ಬೆಲೆಗೆ ಪಟ್ಟು ; ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತರ ಬೃಹತ್ ಧರಣಿ!

Share

ಕಬ್ಬಿಗೆ ಪ್ರತಿ ಟನ್ ಹಾಗೂ ಸೂಕ್ತ ಬೆಂಬಲ ಬೆಲೆ ನಿಗದಿಗೆ ಒತ್ತಾಯಿಸಿ ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಎದುರು ರೈತ ಸಂಘಟನೆಗಳು ಬೃಹತ್ ಧರಣಿ ಸತ್ಯಾಗ್ರಹ ಆರಂಭಿಸಿವೆ. ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಆಕ್ರೋಶ ಹೊರಹಾಕಿರುವ ರೈತರು, ತಮ್ಮ ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಕ್ಷೇಮ ಅಭಿವೃದ್ಧಿ ಸೇವಾ ರೈತ ಸಂಘಟನೆಯ ಜಂಟಿ ಆಶ್ರಯದಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ಕನಿಷ್ಠ 5,500 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ರೈತ ನಾಯಕರು ಪಟ್ಟು ಹಿಡಿದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು 3,500 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರೂ, ಪ್ರಸ್ತುತ ಇರುವ ಸಾಲ ಹಾಗೂ ವೆಚ್ಚಗಳಿಗೆ ಅದು ಸಾಲದಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಬ್ಬು ಬೆಳೆಗಾರರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಮಧ್ಯಾಹ್ನ ಅಥವಾ ಸಂಜೆಯೊಳಗೆ ಸರ್ಕಾರ ಹಾಗೂ ಅಧಿಕಾರಿಗಳಿಂದ ಸ್ಪಷ್ಟ ಹಾಗೂ ಸಕಾರಾತ್ಮಕ ನಿರ್ಣಯ ಬಾರದಿದ್ದರೆ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಕಚೇರಿಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು. ಅಲ್ಲದೆ, ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಸಂಘಟಿಸಿ ಉಗ್ರ ಸ್ವರೂಪದ ಹೋರಾಟ ರೂಪಿಸಲಾಗುವುದು ಎಂದು ರೈತ ಮುಖಂಡ ಸುರೇಶ್ ಪರಗಣ್ಣವರ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಚಿನ್ನಪ್ಪ ಹುಂಬಿ ಮಾತನಾಡಿ, ಕೇಂದ್ರ-ರಾಜ್ಯ ಸರ್ಕಾರಗಳು ಹಾಗೂ ಕಾರ್ಖಾನೆ ಮಾಲೀಕರು ಶಾಮೀಲಾಗಿ ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಾಗರೋಪಾದಿ ಆರೋಪ ಮಾಡಿದರು. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಒಡೆತನದಲ್ಲೇ ಬಹುತೇಕ ಫ್ಯಾಕ್ಟರಿಗಳಿರುವುದರಿಂದ ಎಲ್ಲರೂ ನಾಟಕವಾಡುತ್ತಿದ್ದಾರೆ. ಬೆಂಬಲ ಬೆಲೆ ಸಿಗುವವರೆಗೂ ಹೋರಾಟ ಹಿಂಪಡೆಯುವುದಿಲ್ಲ. ಬೇಡಿಕೆ ಈಡೇರದಿದ್ದರೆ ‘ಜೈಲು ಭರೋ’ ಚಳುವಳಿ ನಡೆಸುವುದರ ಜೊತೆಗೆ, ನಾಳೆಯಿಂದಲೇ ಶಾಸಕರು ಹಾಗೂ ಕಾರ್ಖಾನೆ ಮಾಲೀಕರ ಮನೆಗಳಿಗೆ ಬೀಗ ಜಡಿಯುವ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಗುಡುಗಿದ್ದಾರೆ.

Tags:

error: Content is protected !!