ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ-2022 ಅಂದರೆ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಕ್ರೈಸ್ತ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ.

ಮತಾಂತರ ನಿಷೇಧ ಕಾಯ್ದೆಯು ಸಂವಿಧಾನದ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿರುವ ಸಮುದಾಯದ ಮುಖಂಡರು, ಕಾಯ್ದೆ ರದ್ದತಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ-2022 ಅನ್ನು ಸಂಪೂರ್ಣವಾಗಿ ವಿರೋಧಿಸಿ ಬೆಳಗಾವಿಯಲ್ಲಿ ಕ್ರೈಸ್ತ ಸಮುದಾಯ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಧರಣಿ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಷಪ್ ಡೇರಿಕ್ ಫೆರ್ನಾಂಡಿಸ್ ಅವರು, ಬಲವಂತವಾಗಿ ಅಥವಾ ಆಮಿಷ ಒಡ್ಡಿ ಮತಾಂತರಗೊಳಿಸುವ ಯಾವುದೇ ದುರುದ್ದೇಶ ನಮಗಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಭಾರತದ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿರುವ ಧರ್ಮವನ್ನು ಸ್ವತಂತ್ರವಾಗಿ ನಂಬುವ, ಆಚರಿಸುವ ಮತ್ತು ಪ್ರಚಾರ ಮಾಡುವ ಮೂಲಭೂತ ಹಕ್ಕನ್ನು ಈ ಕಾಯ್ದೆ ನಿರ್ಬಂಧಿಸುತ್ತಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಈ ಕಾಯ್ದೆಯು ಧಾರ್ಮಿಕ ಸ್ವಾತಂತ್ರ್ಯವನ್ನು ಚಲಾಯಿಸುವವರ ಮೇಲೆ ಅನ್ಯಾಯದ ನಿರ್ಬಂಧಗಳನ್ನು ವಿಧಿಸುವ ಮೂಲಕ ಸಂವಿಧಾನದ ಸಮಾನತೆ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯದ ತತ್ವಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಕ್ರೈಸ್ತ ಸಮುದಾಯದ ವಿರುದ್ಧ ಹಲವೆಡೆ ದೌರ್ಜನ್ಯ ಮತ್ತು ಸುಳ್ಳು ಅಪವಾದಗಳನ್ನು ಹೊರಿಸುವ ಕೃತ್ಯಗಳು ಹೆಚ್ಚುತ್ತಿದ್ದು, ಸರ್ಕಾರ ಕೂಡಲೇ ಸಂವಿಧಾನಿಕ ಹಕ್ಕುಗಳನ್ನು ಗೌರವಿಸಿ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
